
ದಾವಣಗೆರೆ, 13 ನವೆಂಬರ್ (ಹಿ.ಸ.):
ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬುಳ್ಳಮ್ಮ (70) ಕೊಲೆಯಾದ ದುರ್ದೈವಿ ತಾಯಿ. ಹನುಮಂತಪ್ಪ (35) ಕೊಲೆ ಆರೋಪಿಯಾಗಿದ್ದು, ಆತನನ್ನು ಬಸವಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಬುಳ್ಳಮ್ಮ ಅವರು ತಮ್ಮ ಮಗಳ ಮನೆಯಲ್ಲಿ ವಾಸವಾಗಿದ್ದರು. ತಾಯಿಯನ್ನು ನೋಡಲು ದೊಡ್ಡಘಟ್ಟ ಗ್ರಾಮಕ್ಕೆ ಬಂದಿದ್ದ ಹನುಮಂತಪ್ಪ, ಕುಡಿಯಲು ಹಣ ನೀಡುವಂತೆ ಪೀಡಿಸಿದ್ದಾನೆ.
ಆದರೆ ತಾಯಿ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಆತ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಹನುಮಂತಪ್ಪ ಈ ಹಿಂದೆಯೂ ಹಣದ ವಿಚಾರವಾಗಿ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ.
ಸುಮಾರು ಏಳು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಆತ, ಎರಡು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿ ಹೊರಬಂದಿದ್ದ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R