
ಬಾಗಲಕೋಟೆ, 13 ನವೆಂಬರ್ (ಹಿ.ಸ.)
ಕೇಂದ್ರ ಸರ್ಕಾರದ ನೀತಿಗಳು ಹಾಗೂ ಚುನಾವಣಾ ಪ್ರಕ್ರಿಯೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಮಾಜಿ ಶಾಸಕರಾದ ಆನಂದ ನ್ಯಾಮಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿದರಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಬಾದಾಮಿ ನಗರದ ಪ್ರಮುಖ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ವೋಟ್ ಚೋರ್ ಗದ್ದಿ ಚೋಡ್ (ಮತ ಕಳ್ಳರೇ ಅಧಿಕಾರ ಬಿಟ್ಟು ತೊಲಗಿ) ಹಾಗೂ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿದರು. ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಪ್ರತಿಭಟನಾಕಾರರು, ಈ ವಿಚಾರದಲ್ಲಿ ನೈತಿಕ ಹೊಣೆ ಹೊತ್ತು ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪೇ ಅಂತಿಮ. ಆದರೆ, ಚುನಾವಣಾ ಪ್ರಕ್ರಿಯೆಗಳ ಮೇಲೆ ಜನರಿಗೆ ಅನುಮಾನ ಮೂಡುವಂತಹ ವಾತಾವರಣ ನಿರ್ಮಾಣವಾಗಿದೆ. ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಮುಂದುವರಿದು ಮಾತನಾಡಿದ ಅವರು, ಜನರ ವಿಶ್ವಾಸವನ್ನು ಕಳೆದುಕೊಂಡಿರುವವರು ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಹೊಂದಿಲ್ಲ. ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಜನವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ಧೋರಣೆಗಳನ್ನು ನಮ್ಮ ಪಕ್ಷ ಎಂದಿಗೂ ಸಹಿಸುವುದಿಲ್ಲ; ಈ ಹೋರಾಟವನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸ್ಥಳೀಯ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಹಿರಿಯ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande