
ಬೆಂಗಳೂರು, 13 ನವೆಂಬರ್ (ಹಿ.ಸ.):
ಪೌರಾಡಳಿತ ನಿರ್ದೇಶನಾಲಯದ ನೀರು ಸರಬರಾಜು ನಿರ್ವಾಹಕ ಹಾಗೂ ಸಹಾಯಕ ನೀರು ಸರಬರಾಜು ನಿರ್ವಾಹಕ ಮತ್ತು ನೌಕರರ ರಾಜ್ಯ ವಿಮಾ ಯೋಜನೆ (ಇಎಸ್ಐ) ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 14ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ವಿಡಿಯೊ ಸಂವಾದದ ಮೂಲಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಕಟ್ಟುನಿಟ್ಟಾಗಿ ನಡೆಸುವಂತೆ ಸೂಚನೆ ನೀಡಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿ ಪರೀಕ್ಷಾ ಕೇಂದ್ರದಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ಲೋಪಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ದೂರವಾಣಿ ಸೇರಿದಂತೆ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಬಾರದು. ಅಭ್ಯರ್ಥಿಗಳನ್ನು ಸಮರ್ಪಕವಾಗಿ ತಪಾಸಣೆ ನಡೆಸಿದ ಬಳಿಕವಷ್ಟೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಬೇಕು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶವಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಪರೀಕ್ಷಾ ನಿಯಂತ್ರಕಿ ಅರ್ಚನಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.