15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ
ಮಾಸಿಕ 15 ಸಾವಿರ ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ನಡೆಸಲಿದ್ದಾರೆ.
ASHA-Workers-Intensify-Protest-Demanding-Rs-15000-Honorarium-From-November-17


ಬೆಂಗಳೂರು, 14 ನವೆಂಬರ್ (ಹಿ.ಸ.):

ಮಾಸಿಕ 15 ಸಾವಿರ ರೂಪಾಯಿ ಗೌರವಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ಮತ್ತೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ.

ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ಕರೆ ನೀಡಿದೆ.

ಕಳೆದ 17ರಿಂದ 18 ವರ್ಷಗಳಿಂದ ರಾಜ್ಯದ ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಮರ್ಪಕ ಗೌರವಧನ ನೀಡಬೇಕು ಎಂಬುದು ಸಂಘದ ಪ್ರಮುಖ ಬೇಡಿಕೆಯಾಗಿದೆ.

ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸಬೇಕು. ನಮಸ್ತೆ ಆ್ಯಪ್ ಮೂಲಕ ನಿರ್ವಹಿಸಬೇಕಾದ ಮೊಬೈಲ್ ಕೆಲಸದ ಒತ್ತಡವನ್ನು ಕೈಬಿಡಬೇಕು ಅಥವಾ ಅಗತ್ಯ ಮೊಬೈಲ್ ಸೌಲಭ್ಯ, ಪ್ರೋತ್ಸಾಹಧನ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಘ ಒತ್ತಾಯಿಸಿದೆ.

ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿರುವ ಬಾಕಿ ಇಡಿಗಂಟನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಡಿಗಂಟಿನ ಮೊತ್ತವನ್ನು ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ.

ಇದರೊಂದಿಗೆ ಆಶಾ ನಿಧಿಯಲ್ಲಿ ಬಾಕಿ ಉಳಿದಿರುವ ಪ್ರೋತ್ಸಾಹಧನ ಬಿಡುಗಡೆ, ಆಶಾ ಸುಗಮಕಾರರ ಮರುನೇಮಕ ಹಾಗೂ ಬಾಕಿ ಇರುವ ವೇತನ ಹೆಚ್ಚಳದ ಮೊತ್ತವನ್ನು ಪಾವತಿಸಬೇಕು ಎಂದು ಆಗ್ರಹಿಸಲಾಗಿದೆ.

ತೀವ್ರ ಕಾಯಿಲೆಗಳಿಂದ ಬಳಲುವ ಆಶಾ ಕಾರ್ಯಕರ್ತೆಯರಿಗೆ ಚಿಕಿತ್ಸೆಯ ಅವಧಿಯಲ್ಲಿ ಕನಿಷ್ಠ ಮೂರು ತಿಂಗಳ ಗೌರವಧನ ನೀಡಬೇಕು ಎಂಬ ಬೇಡಿಕೆಯನ್ನೂ ಸಂಘ ಸರ್ಕಾರದ ಮುಂದಿಟ್ಟಿದೆ.

ಈ ಕುರಿತು ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಹೇಳಿಕೆ ನೀಡಿದ್ದು, ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande