ಬೆಲೆ ಏರಿಕೆ ಖಂಡಿಸಿ ಗದಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ಗದಗ, 14 ನವೆಂಬರ್ (ಹಿ.ಸ.) ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೆಲೆ ಏರಿಕೆ ಕ್ರಮಗಳನ್ನು ಖಂಡಿಸಿ ಗದಗ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಜನರಲ್ ಕಾರ್ಯಪ್ಪ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಬಿಜೆಪಿ ಮುಖಂಡರ
ಫೋಟೋ


ಗದಗ, 14 ನವೆಂಬರ್ (ಹಿ.ಸ.)

ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೆಲೆ ಏರಿಕೆ ಕ್ರಮಗಳನ್ನು ಖಂಡಿಸಿ ಗದಗ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಜನರಲ್ ಕಾರ್ಯಪ್ಪ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜನರಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಎತ್ತಿನ ಬಂಡಿಯೊಂದಿಗೆ ಆಗಮಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಂತರ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲಿನ ಬೆಲೆ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೊರಿಸಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಟೀಕಿಸಿದ ಅವರು, ಜನವಿರೋಧಿ ಬೆಲೆ ಏರಿಕೆ ನೀತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಹಳೆ ಬಸ್ ನಿಲ್ದಾಣದಲ್ಲಿದ್ದ ಬಸ್ಗಳನ್ನು ಖಾಲಿ ಮಾಡಿಸಿದರು. ಇದರಿಂದ ಕೆಲಕಾಲ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿ ಕಂಡುಬಂದಿತು.

ಪ್ರತಿಭಟನೆಯಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮಾಜಿ ಶಾಸಕ ಅನಿಲ್ ಮೆಣಸಿನಕಾಯಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande