
ಬೆಂಗಳೂರು, 14 ನವೆಂಬರ್ (ಹಿ.ಸ.):
ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿ ವಿಚಾರವಾಗಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಹತ್ವದ ಹೇಳಿಕೆ ನೀಡಿದ್ದಾರೆ.
ನಿಗಮ ಮಂಡಳಿಗಳಿಗೆ ನೇಮಕಗೊಂಡಿರುವ ಆರ್‌ಎಸ್‌ಎಸ್ ನಂಟು ಹೊಂದಿರುವವರು ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಸರ್ಕಾರವೇ ಅವರ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸುಮಾರು 400ಕ್ಕೂ ಹೆಚ್ಚು ನೇಮಕಾತಿಗಳನ್ನು ಮಾಡುವ ಸಂದರ್ಭದಲ್ಲಿ ಒಂದೆರಡು ಅಚಾತುರ್ಯಗಳು ನಡೆದಿರುವ ಸಾಧ್ಯತೆಯಿದೆ. ಇಂತಹ ತಪ್ಪುಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಮುಂದಿನ ದಿನಗಳಲ್ಲಿ ಇನ್ನೂ ಎರಡು ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಗಳನ್ನು ಪ್ರಕಟಿಸಲಾಗುವುದು. ಅರ್ಹರಿಗೆ ಸೂಕ್ತ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಈ ಹೇಳಿಕೆಯ ಮೂಲಕ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಆರ್‌ಎಸ್‌ಎಸ್ ನಂಟು ಹೊಂದಿರುವವರಿಗೆ ಅವಕಾಶ ನೀಡಬಾರದು ಎಂಬ ತಮ್ಮ ನಿಲುವನ್ನು ಅವರು ಸ್ಪಷ್ಟಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R