ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಿಎಂ ಸಾಂತ್ವನ: 200 ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆಯ ಭರವಸೆ
ಬೆಂಗಳೂರು, 14 ನವೆಂಬರ್ (ಹಿ.ಸ.) ಮಕ್ಕಳ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ಭೇಟಿ ನೀಡಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿರುವ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿ ಧೈರ್ಯ ತುಂಬಿದರು. ಆಸ್ಪತ್ರೆಯ ಮಕ್ಕಳ ವಾರ್ಡ್‌ಗಳಿಗೆ ಭೇಟ
ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳ ಜೊತೆ ಸಿಎಂ


ಬೆಂಗಳೂರು, 14 ನವೆಂಬರ್ (ಹಿ.ಸ.)

ಮಕ್ಕಳ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ಭೇಟಿ ನೀಡಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿರುವ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿ ಧೈರ್ಯ ತುಂಬಿದರು.

ಆಸ್ಪತ್ರೆಯ ಮಕ್ಕಳ ವಾರ್ಡ್‌ಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ, ಮಾಗಡಿಯ ಧನುಷ್, ಹೊಸೂರಿನ ಪಾರ್ಥಸಾರಥಿ, ಹುಮನಾಬಾದ್‌ನ ಪೂಜಾ ಸೇರಿದಂತೆ ವಿವಿಧ ಜಿಲ್ಲೆಗಳ ಮಕ್ಕಳ ಆರೋಗ್ಯ ವಿಚಾರಿಸಿದರು. ಮಕ್ಕಳಿಗೆ ಚಾಕೊಲೇಟ್, ಗುಲಾಬಿ ಹೂವು ಹಾಗೂ ಚಿತ್ರಕಲೆಯ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.

ಟೀಚರ್ ಆಗಬೇಕೆಂಬ ಆಸೆ ವ್ಯಕ್ತಪಡಿಸಿದ ಪೂಜಾಗೆ, ಶಿಕ್ಷಕಿಯಾಗಿ ದೇಶಕ್ಕೆ ಸೇವೆ ಸಲ್ಲಿಸುವಂತೆ ಹಾರೈಸಿದರು. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ, ಭಯಪಡಬೇಡಿ, ಎಲ್ಲವೂ ಸರಿಯಾಗಲಿದೆ ಎಂದು ಸಾಂತ್ವನ ಹೇಳಿದರು.

ಮಕ್ಕಳಿಗೆ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆಯೇ, ಊಟದ ವ್ಯವಸ್ಥೆ ಇದೆಯೇ ಎಂದು ವಿಚಾರಿಸಿದ ಅವರು, ಪೋಷಕರೊಂದಿಗೂ ಮಾತನಾಡಿ ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಕನಕಪುರದ ಋತ್ವಿಕ್ ಅವರ ತಾಯಿಯ ಎಪಿಎಲ್ ಪಡಿತರ ಚೀಟಿಯನ್ನು ಬಿಪಿಎಲ್‌ಗೆ ಬದಲಾಯಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿದರು.

ಕಿದ್ವಾಯಿ ಆಸ್ಪತ್ರೆಯಲ್ಲಿ 200 ಹೆಚ್ಚುವರಿ ಹಾಸಿಗೆ

ಕಿದ್ವಾಯಿ ಆಸ್ಪತ್ರೆಯಲ್ಲಿ 200 ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ದೂರದ ಜಿಲ್ಲೆಗಳಿಂದ ಮಕ್ಕಳ ಚಿಕಿತ್ಸೆಗೆ ಬರುವ ತಾಯಂದಿರು ಮತ್ತು ಸಂಬಂಧಿಕರ ವಸತಿ ಸೌಲಭ್ಯಕ್ಕಾಗಿ ಮೂರು ಎಕರೆ ಜಾಗ ಒದಗಿಸುವ ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು.

ತುಮಕೂರು, ಮೈಸೂರು, ಬಳ್ಳಾರಿ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯ ವಿಸ್ತರಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಚಿಕಿತ್ಸೆಗಾಗಿ ದೂರದ ಊರುಗಳಿಂದ ಬರುವ ಕುಟುಂಬಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಆಸ್ಪತ್ರೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ ತಿಳಿಸುವಂತೆ ಪೋಷಕರಿಗೆ ಸೂಚಿಸಿದ ಅವರು, ಮಕ್ಕಳ ಆರೋಗ್ಯ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಕ್ಕಳೊಂದಿಗೆ ಸಮಯ ಕಳೆದು, ಅವರಲ್ಲಿ ಆತ್ಮವಿಶ್ವಾಸ ತುಂಬುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿದ ಮುಖ್ಯಮಂತ್ರಿ, ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳಿಗೆ ಶುಭ ಹಾರೈಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande