





ಬಳ್ಳಾರಿ, 14 ನವೆಂಬರ್ (ಹಿ.ಸ.)
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ಕೇವಲ ಆರ್ಥಿಕ ನೆರವು ನೀಡುವುದಲ್ಲ. ಸಮಾಜದ ಎಲ್ಲ ವರ್ಗಗಳ ಬಡವರು, ಮಹಿಳೆಯರು, ಮಕ್ಕಳು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಆಶಯ ಸರ್ಕಾರದ್ದಾಗಿದೆ. ಜನರ ಜೀವನಮಟ್ಟ ಸುಧಾರಿಸುವುದರ ಜತೆಗೆ ಬಳ್ಳಾರಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳು ಹಾಗೂ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಬಳ್ಳಾರಿ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿರುವ ‘ಸರ್ಕಾರ ಬಾಗಿಲಿಗೆ ಬಂತು, ಸರ್ಕಾರ ಸೇವೆಗೆ ಇರಲಿ ಸಹಕಾರ’ ಎಂಬ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ನಗರದ ಬಂಡಿಮೋಟ್ ಪ್ರದೇಶದ ಎಪಿಎಂಸಿ ಮುಖ್ಯ ಹರಾಜು ಮಾರುಕಟ್ಟೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾಸೇವಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಗಳ ಮೂಲಕ ಮಹಿಳೆಯರು ಮತ್ತು ಬಡ ಕುಟುಂಬಗಳಿಗೆ ನೆರವು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಜನಸಾಮಾನ್ಯರ ಅನುಕೂಲಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಸರ್ಕಾರದ ಯೋಜನೆಗಳ ಉದ್ದೇಶ ಹಾಗೂ ಅವುಗಳಿಂದ ಜನರಿಗೆ ಆಗುತ್ತಿರುವ ಪ್ರಯೋಜನಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರ ಜನರ ಸೇವೆಗೆ ಆದ್ಯತೆ ನೀಡುತ್ತಿದೆ ಎಂದರು.
ಬಳ್ಳಾರಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ತುಂಗಭದ್ರಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಆದ್ಯತೆ ನೀಡಲಾಗಿದೆ. ಸುಮಾರು 770 ಕೋಟಿ ರೂ. ವೆಚ್ಚದ ಯೋಜನೆಯಡಿ ಮೊದಲ ಹಂತದಲ್ಲಿ 270 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಓವರ್ಹೆಡ್ ಟ್ಯಾಂಕ್ಗಳ ನಿರ್ಮಾಣ ಹಾಗೂ ಮನೆಮನೆಗೆ ಪೈಪ್ಲೈನ್ ಮೂಲಕ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿವಿಧ ಮೂಲಗಳ ನೀರು ಮಿಶ್ರಣವಾಗುವುದರಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸಿ, ತುಂಗಭದ್ರಾ ನದಿಯ ನೀರನ್ನು ನಗರದ ಜನರಿಗೆ ಪೂರೈಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ನಗರದಲ್ಲಿ ಹಲವು ವರ್ಷಗಳಿಂದ ಇರುವ ಒಳಚರಂಡಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸುಮಾರು 40 ವರ್ಷಗಳಷ್ಟು ಹಳೆಯದಾದ ಒಳಚರಂಡಿ ಪೈಪ್ಲೈನ್ಗಳಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ ಸುಮಾರು 220 ಕೋಟಿ ರೂ. ಅನುದಾನದಲ್ಲಿ ಬಳ್ಳಾರಿ ನಗರದಾದ್ಯಂತ ಹೊಸ ಯುಜಿಡಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಉತ್ತಮ ನಗರ ವಾತಾವರಣ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.
ಇದಲ್ಲದೆ, ಸ್ವಂತ ಮನೆ ಅಥವಾ ನಿವೇಶನ ಇಲ್ಲದ ಬಡ ಕುಟುಂಬಗಳಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಳ್ಳಾರಿ ನಗರ ಕ್ಷೇತ್ರದಲ್ಲಿ ಸುಮಾರು 10 ಸಾವಿರ ನಿವೇಶನಗಳನ್ನು ಅರ್ಹ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಲಾಗಿದೆ. ಜನವರಿಯೊಳಗೆ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಬಡ ಕುಟುಂಬಗಳಿಗೆ ಸ್ವಂತ ನಿವೇಶನ ಕಲ್ಪಿಸುವ ಆಶಯ ಹೊಂದಲಾಗಿದೆ ಎಂದು ಹೇಳಿದರು.
ನಗರದ ರಸ್ತೆ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿವಿಧ ರಸ್ತೆ ಕಾಮಗಾರಿಗಳಿಗೆ ನೂರಾರು ಕೋಟಿ ರೂಪಾಯಿಗಳ ಅನುದಾನ ಒದಗಿಸುವ ಮೂಲಕ ಹದಗೆಟ್ಟ ರಸ್ತೆಗಳನ್ನು ಸುಧಾರಿಸಿ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಬಾಕಿ ಇರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆ, ಜೆಸ್ಕಾಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮೀನುಗಾರಿಕೆ ಇಲಾಖೆ, ಕೃಷಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ವಿವಿಧ ಇಲಾಖೆಗಳ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು, ಸೌಲಭ್ಯಗಳು ಹಾಗೂ ಸೇವೆಗಳ ಕುರಿತು ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿದಾನಂದಪ್ಪ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ನಾಗಭೂಷಣ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಎಸ್., ತಹಶೀಲ್ದಾರ್ ನರಸಪ್ಪ, ಪಾಲಿಕೆ ಸದಸ್ಯರಾದ ನೂರು ಮಹಮದ್, ಮಿಂಚು ಶ್ರೀನಿವಾಸ್, ರಾಜೇಶ್ವರಿ ಸುಬ್ಬರಾಯುಡು, ರವಿ, ಚಿದಾನಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್