
ವಾಷಿಂಗ್ಟನ್,14 ನವೆಂಬರ್ (ಹಿ.ಸ.):
ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯ ಸಂಪರ್ಕ ಜಾಲದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಶುಕ್ರವಾರ ದೇಶಾದ್ಯಂತ ಸುಮಾರು ನಾಲ್ಕು ಗಂಟೆಗಳ ಕಾಲ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸುರಕ್ಷತಾ ಕಾರಣಗಳನ್ನು ಮುಂದಿಟ್ಟುಕೊಂಡು ಅಮೆರಿಕದ ಫೆಡರಲ್ ವಿಮಾನಯಾನ ಆಡಳಿತವು ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿತ್ತು. ಬಳಿಕ ನಾಲ್ಕು ಗಂಟೆಗಳ ನಂತರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಈ ಅವಧಿಯಲ್ಲಿ 8 ಸಾವಿರಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದುಗೊಂಡಿದ್ದು, ಸುಮಾರು 15 ಲಕ್ಷ ಪ್ರಯಾಣಿಕರು ತೊಂದರೆಗೊಳಗಾಗಿದ್ದಾರೆ. ವಿಮಾನ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳುವ ಪ್ರಕ್ರಿಯೆ ಮುಂದುವರಿದಿದ್ದರೂ, ಶನಿವಾರವೂ ಹೆಚ್ಚಿನ ಸಂಖ್ಯೆಯ ವಿಮಾನಗಳ ಹಾರಾಟ ರದ್ದುಗೊಳಿಸಬೇಕಾಯಿತು.
ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಅಧಿಕಾರಿಗಳು, ಇದುವರೆಗೆ ಯಾವುದೇ ಸೈಬರ್ ದಾಳಿಯ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಪರಿಸ್ಥಿತಿಯನ್ನು 2001ರ ಸೆಪ್ಟೆಂಬರ್ 11ರ ಭಯೋತ್ಪಾದಕ ದಾಳಿಗೆ ಹೋಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಮೆರಿಕದ ಆಂತರಿಕ ಭದ್ರತಾ ಕಾರ್ಯದರ್ಶಿ ಮಾರ್ಕ್ವೇನ್ ಮುಲ್ಲಿನ್ ಮಾತನಾಡಿ, ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಯಾವುದೇ ಬೆದರಿಕೆ ಕಾರಣವಾಗಿಲ್ಲ. ದೂರಸಂಪರ್ಕ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ಅಡಚಣೆಯಿಂದ ಈ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದ್ದಾರೆ.
ಪ್ರಯಾಣಿಕರು ಮತ್ತು ಅವರ ಕುಟುಂಬಗಳ ಸುರಕ್ಷತೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಎಲ್ಲರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
2001ರ ಸೆಪ್ಟೆಂಬರ್ 11ರಂದು ಅಮೆರಿಕದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ದೇಶಾದ್ಯಂತ ವಿಮಾನ ಸಂಚಾರ ವ್ಯವಸ್ಥೆ ಈ ಪ್ರಮಾಣದಲ್ಲಿ ಏಕಕಾಲಕ್ಕೆ ವ್ಯಾಪಕವಾಗಿ ಅಸ್ತವ್ಯಸ್ತಗೊಂಡಿರುವುದು ಇದು ಎರಡನೇ ಬಾರಿ ಎಂದು ವರದಿ ತಿಳಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.