ಶಿಕ್ಷಕರ ವರ್ಗಾವಣಾ ನಿಯಮ–2026ರ ಕರಡು ಅಧಿಸೂಚನೆ ಪ್ರಕಟ
ಕರ್ನಾಟಕ ಪಬ್ಲಿಕ್ ಶಾಲೆಗಳ ಬಲವರ್ಧನೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರ, ಶಿಕ್ಷಕರ ವರ್ಗಾವಣಾ ನಿಯಮ–2026ರ ಕರಡು ಪ್ರಕಟಿಸಿದೆ. ಕೆಪಿಎಸ್ ಶಾಲೆಗಳಿಗೆ ವರ್ಗಾವಣೆಯಾಗುವ ಶಿಕ್ಷಕರಿಗೆ ವೈಟೇಜ್ ಅಂಕ, ಒಂಬತ್ತು ವರ್ಷಗಳ ಸೇವಾವಧಿ ಹಾಗೂ ವಿಶೇಷ ವರ್ಗದ ಶಿಕ್ಷಕರಿಗೆ ವಿನಾಯಿತಿ ಕಲ್ಪಿಸುವ ಪ್ರಸ್ತಾಪ ಮಾಡಲಾಗಿದೆ.
karnataka-government-draft-teachers-transfer-rules-2026-kps-schools


ಬೆಂಗಳೂರು, 14 ನವೆಂಬರ್ (ಹಿ.ಸ.):

ಕರ್ನಾಟಕ ಪಬ್ಲಿಕ್ ಶಾಲೆಗಳ ಬಲವರ್ಧನೆ ಹಾಗೂ ಸರ್ಕಾರಿ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹತ್ವದ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ನಿಯಮಗಳು–2026ರ ಕರಡು ಅಧಿಸೂಚನೆಯನ್ನು ಶುಕ್ರವಾರ ಪ್ರಕಟಿಸಲಾಗಿದೆ.

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ವರ್ಗಾವಣೆಗೊಳ್ಳುವ ಶಿಕ್ಷಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅವರಿಗೆ ಹೆಚ್ಚುವರಿ ವೈಟೇಜ್ ಅಂಕಗಳನ್ನು ನೀಡಲು ಸರ್ಕಾರ ಉದ್ದೇಶಿಸಿದೆ.

ಈ ಮೂಲಕ ಕೆಪಿಎಸ್ ಶಾಲೆಗಳಲ್ಲಿ ಶಿಕ್ಷಕರ ಲಭ್ಯತೆ ಹೆಚ್ಚಿಸುವುದರ ಜತೆಗೆ ಶಿಕ್ಷಣದ ಗುಣಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಿರ್ಣಾಯಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಕನಿಷ್ಠ ಒಂಬತ್ತು ವರ್ಷಗಳ ಕಾಲ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯಗೊಳಿಸುವ ಪ್ರಸ್ತಾಪವೂ ಕರಡು ನಿಯಮಗಳಲ್ಲಿದೆ. ಕೆಪಿಎಸ್ ಶಾಲೆಗಳಲ್ಲಿ ಸೇವೆ ಸಲ್ಲಿಸುವ ಶಿಕ್ಷಕರಿಗೂ ಕನಿಷ್ಠ ಒಂಬತ್ತು ವರ್ಷಗಳ ಸೇವಾವಧಿಯನ್ನು ನಿಗದಿಪಡಿಸಲಾಗಿದೆ.

ಒಂದೇ ಶಾಲೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಯುತ್ತದೆ. ವಿದ್ಯಾರ್ಥಿಗಳ ವೈಯಕ್ತಿಕ ಸಾಮರ್ಥ್ಯ ಹಾಗೂ ಕಲಿಕೆಯ ಅಗತ್ಯಗಳನ್ನು ಶಿಕ್ಷಕರು ಹೆಚ್ಚು ಪರಿಣಾಮಕಾರಿಯಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ.

ಇದರಿಂದ ವಿದ್ಯಾರ್ಥಿಗಳ ಅಗತ್ಯಕ್ಕೆ ಅನುಗುಣವಾಗಿ ಬೋಧನಾ ವಿಧಾನಗಳನ್ನು ರೂಪಿಸಲು ಅನುಕೂಲವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ತಾಲೂಕು ಮಟ್ಟದಲ್ಲಿ ಖಾಲಿ ಹುದ್ದೆಗಳಿಗೆ ಸಂಬಂಧಿಸಿದ ಶೇಕಡಾವಾರು ಮಿತಿಯನ್ನು ಶೇ.25ರಷ್ಟು ಸಡಿಲಗೊಳಿಸಲಾಗಿದೆ. ಇದರಿಂದ ಶಿಕ್ಷಕರಿಗೆ ವರ್ಗಾವಣೆಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆಯಲ್ಲಿ ಮಾನವೀಯ ದೃಷ್ಟಿಕೋನಕ್ಕೂ ಆದ್ಯತೆ ನೀಡಲಾಗಿದೆ. ಗರ್ಭಿಣಿ ಶಿಕ್ಷಕಿಯರು ಹಾಗೂ ಐದು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ವಿಶೇಷ ವಿನಾಯಿತಿಗಳನ್ನು ಕಲ್ಪಿಸಲಾಗಿದೆ.

ಜತೆಗೆ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ಅಂಗವೈಕಲ್ಯ ಹೊಂದಿರುವ ಶಿಕ್ಷಕರಿಗೂ ಅನುಕೂಲವಾಗುವಂತೆ ನಿಯಮಗಳಲ್ಲಿ ಅವಕಾಶಗಳನ್ನು ರೂಪಿಸಲಾಗಿದೆ.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಹೆಚ್ಚು ಅನುಕೂಲಕರವಾಗಿಸುವುದರ ಜತೆಗೆ ಕೆಪಿಎಸ್ ಶಾಲೆಗಳ ಬಲವರ್ಧನೆಗೆ ಸಹಕಾರಿಯಾಗುವ ಉದ್ದೇಶದಿಂದ ಈ ತಿದ್ದುಪಡಿಗಳನ್ನು ತರಲಾಗಿದೆ.

ವರ್ಗಾವಣಾ ನಿಯಮಗಳಲ್ಲಿ ಮಾಡಿರುವ ಬದಲಾವಣೆಗಳನ್ನು ಶಿಕ್ಷಕ ಸಮುದಾಯ ಸಕಾರಾತ್ಮಕವಾಗಿ ಸ್ವೀಕರಿಸಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande