ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆಗೆ ಒಲವು: ಆರ್.ಅಶೋಕ್
ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಸಬೇಕೆಂಬ ಅಭಿಪ್ರಾಯ ಬಹುತೇಕ ಮುಖಂಡರಲ್ಲಿದೆ. ಈ ಕುರಿತು ಸಮನ್ವಯ ಸಮಿತಿ ಸಭೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಆರ್.ಅಶೋಕ್ ತಿಳಿಸಿದ್ದಾರೆ.
bjp-jds-alliance-to-continue-in-district-and-taluk-panchayat-elections-r-ashoka


ಬೆಂಗಳೂರು, 15 ನವೆಂಬರ್ (ಹಿ.ಸ.):

ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಬೇಕೆಂಬ ಅಭಿಪ್ರಾಯ ಉಭಯ ಪಕ್ಷಗಳ ಬಹುತೇಕ ಮುಖಂಡರಲ್ಲಿ ವ್ಯಕ್ತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ರವಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜಕೀಯ ಹೊಂದಾಣಿಕೆ ಇರಬೇಕೆಂಬ ಅಭಿಪ್ರಾಯ ಹಲವರಲ್ಲಿದೆ.

ಆದರೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ರಾಜಕೀಯ ವಾತಾವರಣವಿದೆ. ಹೀಗಾಗಿ ಈ ವಿಚಾರದಲ್ಲಿ ಸಮನ್ವಯ ಸಮಿತಿ ಸಭೆ ನಡೆಸಿ, ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು ಎಂದು ಹೇಳಿದರು.

ವರಿಷ್ಠರ ತೀರ್ಮಾನಕ್ಕೆ ಬದ್ಧ:

ಮೈತ್ರಿ ಮುಂದುವರಿಸುವ ವಿಚಾರದಲ್ಲಿ ಸಮನ್ವಯದಿಂದ ನಿರ್ಧಾರ ಕೈಗೊಳ್ಳಲಾಗುವುದು. ಅಂತಿಮವಾಗಿ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದು ಆರ್.ಅಶೋಕ್ ಸ್ಪಷ್ಟಪಡಿಸಿದರು.

ಹಿರಿಯೂರು ಉಪಚುನಾವಣೆ ಟಿಕೆಟ್ ವಿಚಾರ:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಅನ್ನು ಬಿಜೆಪಿ ಅಭ್ಯರ್ಥಿಗೆ ನೀಡಬೇಕೆಂದು ಮನವಿ ಮಾಡಲಾಗುತ್ತಿದೆ.

ಈ ಸಂಬಂಧ ಅಂತಿಮ ನಿರ್ಧಾರವನ್ನು ಕೇಂದ್ರದ ನಾಯಕರು ಕೈಗೊಳ್ಳಲಿದ್ದು, ಅವರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.

ಈ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಲಾಗುವುದು.

ಮೈತ್ರಿ ಹಾಗೂ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಭಯ ಪಕ್ಷಗಳ ಮುಖಂಡರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು ಎಂದು ಆರ್.ಅಶೋಕ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande