ಶಿಕ್ಷಣ, ಸಂಘಟನೆ ಮತ್ತು ಹೋರಾಟದ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಯತೀಂದ್ರ ಸಿದ್ದರಾಮಯ್ಯ
ಮೈಸೂರು, 15 ನವೆಂಬರ್ (ಹಿ.ಸ.): ದೇಶದಲ್ಲಿ ಜಾತೀಯತೆ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಸಂವಿಧಾನಬದ್ಧ ಸಮಾನತೆಯ ಆಶಯ ಸಾಕಾರಗೊಳ್ಳಲು ಇನ್ನೂ ಸಾಕಷ್ಟು ದೂರ ಸಾಗಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನರು ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡುವುದರ ಜತೆಗೆ ಉನ್ನತ ಹುದ್ದೆಗಳನ್ನು
ಜಯಂತಿ


ಮೈಸೂರು, 15 ನವೆಂಬರ್ (ಹಿ.ಸ.):

ದೇಶದಲ್ಲಿ ಜಾತೀಯತೆ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಸಂವಿಧಾನಬದ್ಧ ಸಮಾನತೆಯ ಆಶಯ ಸಾಕಾರಗೊಳ್ಳಲು ಇನ್ನೂ ಸಾಕಷ್ಟು ದೂರ ಸಾಗಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನರು ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡುವುದರ ಜತೆಗೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿಭಾಗದ ಕರ್ನಾಟಕ ರಾಜ್ಯ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ವತಿಯಿಂದ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ದಲಿತ ಚಳವಳಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹನೀಯರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಶತಮಾನಗಳಿಂದ ಶೋಷಣೆ ಮತ್ತು ನೋವನ್ನು ಅನುಭವಿಸಿರುವ ಸಮುದಾಯದ ಯುವಜನರಲ್ಲಿ ಆತ್ಮವಿಶ್ವಾಸ, ಸ್ವಾಭಿಮಾನ ಹಾಗೂ ಸಾಧನೆಯ ಹಂಬಲವನ್ನು ಮೂಡಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಮಹತ್ವದ್ದಾಗಿವೆ ಎಂದು ತಿಳಿಸಿದರು.

ಬಾಬಾಸಾಹೇಬರು ಪ್ರತಿಪಾದಿಸಿದ 'ಶಿಕ್ಷಣ, ಸಂಘಟನೆ ಮತ್ತು ಹೋರಾಟ' ಎಂಬ ತತ್ವವನ್ನು ಜೀವನದ ಮಾರ್ಗದರ್ಶಿಯಾಗಿ ಸ್ವೀಕರಿಸಬೇಕು. ನಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಡಬೇಕು. ಹಿಂದುಳಿದ ಸಮುದಾಯಗಳಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆ ನೆಲೆಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ. ವೈಯಕ್ತಿಕವಾಗಿ ಸಾಧನೆ ಮಾಡಿದ ಪ್ರತಿಯೊಬ್ಬರೂ ತಮ್ಮ ಸಮುದಾಯದ ಏಳಿಗೆಗೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಗಣನೀಯ ಸೇವೆ ಸಲ್ಲಿಸಿದ ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಶೈಕ್ಷಣಿಕವಾಗಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ 'ಇವನಾರವ' ಚಲನಚಿತ್ರದ ಭಿತ್ತಿಪತ್ರ ಹಾಗೂ ಮುನ್ನೋಟವನ್ನು ಬಿಡುಗಡೆ ಮಾಡಲಾಯಿತು.

ಉರಿಲಿಂಗ ಪೆದ್ದಿ ಮಠದ ಆಯುಷ್ಮಾನ್ ಜ್ಞಾನಪ್ರಕಾಶ ಸ್ವಾಮೀಜಿ, ಜೇತವನ ಬುದ್ಧ ವಿಹಾರದ ಆಯುಷ್ಮಾನ್ ಮನೋರಖಿತ ಬಂತೇಜಿ, ವಿಶ್ವಮೈತ್ರಿ ಬುದ್ಧ ವಿಹಾರದ ಆಯುಷ್ಮಾನ್ ಡಾ. ಕಲ್ಯಾಣಸಿರಿ ಬಂತೇಜಿ, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಕರ್ನಾಟಕ ರಾಜ್ಯ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ. ಡಿ. ಚಂದ್ರಶೇಖರಯ್ಯ, ಮೈಸೂರು ಜಿಲ್ಲಾಧ್ಯಕ್ಷ ಡಾ. ಎಂ.ಡಿ. ಶಿವರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande