ಜನರ ಬದುಕಿನಲ್ಲಿ ಬದಲಾವಣೆ, ಯುವಜನತೆಗೆ ಅವಕಾಶ ಸೃಷ್ಟಿಯೇ ನಮ್ಮ ಗುರಿ: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, 15 ನವೆಂಬರ್ (ಹಿ.ಸ.): ಕಟ್ಟಡಗಳ ನಿರ್ಮಾಣದ ಜೊತೆಗೆ ಜನರ ಬದುಕಿನಲ್ಲಿ ಬದಲಾವಣೆ ತರುವುದು ಮತ್ತು ಯುವಜನತೆಗೆ ಹೊಸ ಅವಕಾಶಗಳನ್ನು ಸೃಷ್ಟಿಸುವುದೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಭಾರತೀನಗರ ಪೊಲೀಸ್ ಠಾಣೆ ಬಳಿ ಭಾನುವಾರ ಆಯೋಜಿಸಿದ್ದ ಭಾರತೀನಗರ ಹಬ್ಬ
ಬ್ಯಾಡ್ಮಿಂಟನ್ ಅಂಕಣ ಉದ್ಘಾಟಿಸಿದ ಸಿಎಂ


ಬೆಂಗಳೂರು, 15 ನವೆಂಬರ್ (ಹಿ.ಸ.):

ಕಟ್ಟಡಗಳ ನಿರ್ಮಾಣದ ಜೊತೆಗೆ ಜನರ ಬದುಕಿನಲ್ಲಿ ಬದಲಾವಣೆ ತರುವುದು ಮತ್ತು ಯುವಜನತೆಗೆ ಹೊಸ ಅವಕಾಶಗಳನ್ನು ಸೃಷ್ಟಿಸುವುದೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಭಾರತೀನಗರ ಪೊಲೀಸ್ ಠಾಣೆ ಬಳಿ ಭಾನುವಾರ ಆಯೋಜಿಸಿದ್ದ ಭಾರತೀನಗರ ಹಬ್ಬದಲ್ಲಿ ಸಮುದಾಯ ಭವನ, ಆಧುನಿಕ ವ್ಯಾಯಾಮಶಾಲೆ ಹಾಗೂ ಬ್ಯಾಡ್ಮಿಂಟನ್ ಅಂಕಣ ಉದ್ಘಾಟಿಸಿ ಅವರು ಮಾತನಾಡಿದರು.

ಯುವಜನರು ದೇಶದ ದೊಡ್ಡ ಆಸ್ತಿಯಾಗಿದ್ದು, ಅವರಲ್ಲಿ ನಾಯಕತ್ವ ಗುಣ ಬೆಳೆಸುವುದರ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಸಾಮಾಜಿಕ ಸಾಮರಸ್ಯ ಮತ್ತು ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗಿದೆ. ಪ್ರತಿ ವಾರ್ಡ್‌ನಲ್ಲೂ 200ಕ್ಕೂ ಹೆಚ್ಚು ಸದಸ್ಯರು ಸೇರ್ಪಡೆಯಾಗಿದ್ದಾರೆ. 16ರಿಂದ 35 ವರ್ಷದ ಯುವಕರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಂವಾದ ನಡೆಸುವ ಉದ್ದೇಶವಿದೆ. ಭಾರತೀನಗರದಲ್ಲಿಯೂ ಯುವಕರ ಸಭೆ ಆಯೋಜಿಸುವಂತೆ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಸೂಚಿಸುವುದಾಗಿ ತಿಳಿಸಿದರು.

ಸಾಮಾನ್ಯ ಜನರು ಮದುವೆ, ಮುಂಜಿ, ನಾಮಕರಣ ಸೇರಿದಂತೆ ಕುಟುಂಬದ ಕಾರ್ಯಕ್ರಮಗಳಿಗೆ ಖಾಸಗಿ ಸಮುದಾಯ ಭವನಗಳನ್ನು ಅವಲಂಬಿಸಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಬೇಕಾದ ಪರಿಸ್ಥಿತಿಯಿದೆ. ಇದನ್ನು ತಪ್ಪಿಸಲು ಕಡಿಮೆ ವೆಚ್ಚದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಸಮುದಾಯ ಭವನ ನಿರ್ಮಿಸಲಾಗಿದೆ. ವ್ಯಾಯಾಮಶಾಲೆ ಮತ್ತು ಬ್ಯಾಡ್ಮಿಂಟನ್ ಅಂಕಣ ಯುವಕರ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ನೆರವಾಗಲಿವೆ ಎಂದರು.

ಶಿವಾಜಿನಗರ ಬೆಂಗಳೂರಿನ ಹೃದಯಭಾಗವಾಗಿದೆ. ಇಲ್ಲಿನ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ದೊಡ್ಡ ಆಸ್ತಿ. ಜಾತಿ, ಧರ್ಮ, ಭಾಷೆಗಳು ಬೇರೆಬೇರೆಯಾಗಿದ್ದರೂ ನಮ್ಮೆಲ್ಲರ ಹೃದಯ ಒಂದೇ. ಶಿವಾಜಿನಗರದ ಜನತೆ ಕಾಂಗ್ರೆಸ್ ಪಕ್ಷದ ಬೆನ್ನಿಗೆ ಸದಾ ನಿಂತಿದ್ದಾರೆ ಎಂದು ಹೇಳಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಕ್ಷೇತ್ರದ ಯುವಕರಿಗೆ ಹೊಸ ಅವಕಾಶಗಳನ್ನು ಕಲ್ಪಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಕಾರ್ಯಗಳಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande