ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ
ಮೈಸೂರು, 15 ನವೆಂಬರ್ (ಹಿ.ಸ.): ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡಿ, ಬುಡಕಟ್ಟು ಸಮುದಾಯಗಳ ಹಕ್ಕು, ಅಸ್ಮಿತೆ ಮತ್ತು ಸ್ವಾಭಿಮಾನಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಹೋರಾಟ ಮತ್ತು ತ್ಯಾಗ ಸದಾ ಸ್ಮರಣೀಯ. ಅವರ ಆದರ್ಶಗಳು ಇಂದಿನ ಪೀಳಿಗೆಗೂ ಸ್ಫೂರ್ತಿಯಾಗ
ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 151ನೇ ಜಯಂತಿ


ಮೈಸೂರು, 15 ನವೆಂಬರ್ (ಹಿ.ಸ.):

ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡಿ, ಬುಡಕಟ್ಟು ಸಮುದಾಯಗಳ ಹಕ್ಕು, ಅಸ್ಮಿತೆ ಮತ್ತು ಸ್ವಾಭಿಮಾನಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಹೋರಾಟ ಮತ್ತು ತ್ಯಾಗ ಸದಾ ಸ್ಮರಣೀಯ. ಅವರ ಆದರ್ಶಗಳು ಇಂದಿನ ಪೀಳಿಗೆಗೂ ಸ್ಫೂರ್ತಿಯಾಗಿವೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಹಾಗೂ ಜನಜಾತಿಯ ಗೌರವ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಿಕ್ಷಣವು ಮಕ್ಕಳಲ್ಲಿ ಹಕ್ಕುಗಳ ಅರಿವು ಮೂಡಿಸುವುದರ ಜತೆಗೆ ತಮ್ಮ ಹಕ್ಕು ಮತ್ತು ಸ್ವಾಭಿಮಾನಕ್ಕಾಗಿ ಧ್ವನಿ ಎತ್ತುವ ಶಕ್ತಿಯನ್ನು ನೀಡುತ್ತದೆ. ಹೀಗಾಗಿ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಸಮಾನ ಅವಕಾಶ ಮತ್ತು ಸರ್ವರನ್ನೂ ಒಳಗೊಂಡ ಅಭಿವೃದ್ಧಿಯ ಆಶಯದೊಂದಿಗೆ ರಾಜ್ಯ ಸರ್ಕಾರ ಆದಿವಾಸಿ ಹಾಗೂ ಬುಡಕಟ್ಟು ಸಮುದಾಯಗಳ ಏಳಿಗೆಗೆ ಸದಾ ಬದ್ಧವಾಗಿದೆ. ಬುಡಕಟ್ಟು ಸಮುದಾಯದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದಲೂ ಆಚರಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.

ವರ್ಷಪೂರ್ತಿ ಆಹಾರ ಕಿಟ್ ವಿತರಣೆ ಸೇರಿದಂತೆ ಬುಡಕಟ್ಟು ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಹಿಂದೆ ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದ ಎಚ್.ಡಿ. ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವರು ಧನ್ಯವಾದ ಸಲ್ಲಿಸಿದರು. ಅಲ್ಲದೆ, ಬುಡಕಟ್ಟು ಸಮುದಾಯದ ಮುಖಂಡರು ಸಲ್ಲಿಸಿದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿ, ಅವುಗಳ ಕುರಿತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್, ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಅಶೋಕ್ ಡಿ., ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಆರ್. ಗಿರಿಜಾಂಬ ಹೆಚ್.ಎಸ್. ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande