ಎನ್ಜಿಟಿ ಆದೇಶ ಧಿಕ್ಕರಿಸಿ ಯಲಮಲ್ಲಪ್ಪ ಚೆಟ್ಟಿ ಕೆರೆಯಲ್ಲಿ ಅಕ್ರಮ ರಸ್ತೆ ನಿರ್ಮಾಣದ ಆರೋಪ
ಬೆಂಗಳೂರು, 16 ನವೆಂಬರ್ (ಹಿ.ಸ.): ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶದ ಹೊರತಾಗಿಯೂ ಬೆಂಗಳೂರಿನ ಯಲಹಂಕ ಸಮೀಪದ ಯಲಮಲ್ಲಪ್ಪ ಚೆಟ್ಟಿ ಕೆರೆಯಲ್ಲಿ ಅಕ್ರಮ ಚಟುವಟಿಕೆಗಳು ಮುಂದುವರಿದಿವೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಎಕರೆ ವಿಸ್ತೀರ್ಣದ ಕೆರೆ ಪ್ರದೇಶದಲ್ಲಿ ಮಣ್ಣು ಹಾಗೂ ಕಟ್ಟಡ ತ
illegal-road-construction-in-yelamallappa-chetty-lake-ngt-order-ignored


ಬೆಂಗಳೂರು, 16 ನವೆಂಬರ್ (ಹಿ.ಸ.):

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶದ ಹೊರತಾಗಿಯೂ ಬೆಂಗಳೂರಿನ ಯಲಹಂಕ ಸಮೀಪದ ಯಲಮಲ್ಲಪ್ಪ ಚೆಟ್ಟಿ ಕೆರೆಯಲ್ಲಿ ಅಕ್ರಮ ಚಟುವಟಿಕೆಗಳು ಮುಂದುವರಿದಿವೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಎಕರೆ ವಿಸ್ತೀರ್ಣದ ಕೆರೆ ಪ್ರದೇಶದಲ್ಲಿ ಮಣ್ಣು ಹಾಗೂ ಕಟ್ಟಡ ತ್ಯಾಜ್ಯ ಸುರಿದು ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿರುವುದು ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದೆ.

ಕೆರೆಯ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ಹಿಂದೆಯೇ ಎನ್‌ಜಿಟಿ ಆದೇಶ ನೀಡಿತ್ತು. ಆದರೂ ಕೆರೆ ಪ್ರದೇಶದಲ್ಲಿ ಅತಿಕ್ರಮಣ ಪ್ರಯತ್ನಗಳು ನಡೆಯುತ್ತಿವೆ. ಭಾರಿ ಯಂತ್ರಗಳನ್ನು ಬಳಸಿ ಕೆರೆಯೊಳಗೆ ರಸ್ತೆ ನಿರ್ಮಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಮೂರು ತಿಂಗಳ ಹಿಂದೆಯೂ ಅಕ್ರಮ ಯತ್ನ

ಸುಮಾರು ಮೂರು ತಿಂಗಳ ಹಿಂದೆ ಕೆಲವರು ಕೆರೆ ಪ್ರದೇಶದಲ್ಲಿ ಮಣ್ಣು ಮತ್ತು ಕಟ್ಟಡ ತ್ಯಾಜ್ಯ ಸುರಿದು ರಸ್ತೆ ನಿರ್ಮಿಸಲು ಪ್ರಯತ್ನಿಸಿದ್ದರು. ಈ ಕುರಿತು ಆವಲಹಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದವರು ಪರಾರಿಯಾಗಿದ್ದರು. ಈ ವೇಳೆ ಕೆಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ, ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

9 ಕಿ.ಮೀ. ಬೇಲಿ ನಿರ್ಮಾಣಕ್ಕೆ ಕ್ರಮ

ಕೆರೆಯ ಸಂರಕ್ಷಣೆಗಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಸುತ್ತಲೂ ಒಟ್ಟು 9 ಕಿ.ಮೀ. ಉದ್ದದ ಬೇಲಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 2.6 ಕಿ.ಮೀ. ಕಾಮಗಾರಿ ಇನ್ನೂ ಬಾಕಿ ಉಳಿದಿದೆ. ಮುಂದಿನ ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕೆರೆಗೆ ಸೂಕ್ತ ರಕ್ಷಣೆ ಒದಗಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬಡಾವಣೆ, ಅಪಾರ್ಟ್‌ಮೆಂಟ್‌ಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶ?

ಕೆರೆಯ ಒತ್ತುವರಿ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಿರುವ ಜಗನ್ ಕುಮಾರ್, ಕೆರೆಯ ದುಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಎನ್‌ಜಿಟಿಯ ಚೆನ್ನೈ ಪೀಠ ಕೆರೆಯ ಪುನಶ್ಚೇತನಕ್ಕೆ ಆದೇಶ ನೀಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಕೆರೆಯ ನಿರ್ವಹಣೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಆ ಇಲಾಖೆಯನ್ನೇ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಭಾರಿ ಯಂತ್ರಗಳನ್ನು ಬಳಸಿ ಕೆರೆಯೊಳಗೆ ಅಕ್ರಮವಾಗಿ ರಸ್ತೆ ನಿರ್ಮಿಸಲಾಗುತ್ತಿದೆ. ಕೆರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಹೊಸ ಬಡಾವಣೆಗಳು, ಅಪಾರ್ಟ್‌ಮೆಂಟ್‌ಗಳು ಹಾಗೂ ಅಕ್ರಮ ಕೈಗಾರಿಕಾ ಶೆಡ್‌ಗಳಿಗೆ ಸಂಪರ್ಕ ಕಲ್ಪಿಸಿ, ಅವುಗಳ ವಾಣಿಜ್ಯ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವುದೇ ಈ ರಸ್ತೆಯ ಉದ್ದೇಶವಾಗಿದೆ ಎಂದು ಜಗನ್ ಕುಮಾರ್ ಆರೋಪಿಸಿದ್ದಾರೆ.

ಮೇಡಹಳ್ಳಿ ಭಾಗದಲ್ಲಿಯೂ ಜಲ್ಲಿ ಕಲ್ಲುಗಳನ್ನು ಸುರಿಯಲಾಗಿದ್ದು, ಈಗಾಗಲೇ ಕೆರೆಯೊಳಗೆ ಕಚ್ಚಾ ರಸ್ತೆ ನಿರ್ಮಿಸಲಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಈ ರಸ್ತೆಗೆ ಡಾಂಬರು ಹಾಕುವ ಸಾಧ್ಯತೆಯೂ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಎನ್‌ಜಿಟಿ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು, ಕೆರೆ ಪ್ರದೇಶದ ಒತ್ತುವರಿ ತೆರವುಗೊಳಿಸುವುದು ಹಾಗೂ ಬಾಕಿ ಉಳಿದಿರುವ ಬೇಲಿ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕೆರೆಯನ್ನು ಸಂರಕ್ಷಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande