ರೇಷನ್ ಕಾರ್ಡ್ ಇ-ಕೆವೈಸಿಗೆ ಹಣ ವಸೂಲಿ ಮಾಡಿದರೆ ನ್ಯಾಯಬೆಲೆ ಅಂಗಡಿಗಳ ಲೈಸೆನ್ಸ್ ರದ್ದು: ಸಚಿವ ರಿಜ್ವಾನ್ ಅರ್ಷದ್
ರೇಷನ್ ಕಾರ್ಡ್ ಇ-ಕೆವೈಸಿಗಾಗಿ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದರೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ನಿಯಮ ಉಲ್ಲಂಘಿಸಿದ ಅಂಗಡಿಗಳ ವಿರುದ್ಧ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ration-card-ekyc-money-collection-fair-price-shop-licenses-cancelled-rizwan-arshad


ಬೆಂಗಳೂರು, 16 ನವೆಂಬರ್ (ಹಿ.ಸ.):

ಪಡಿತರ ಚೀಟಿದಾರರಿಂದ ಇ-ಕೆವೈಸಿ ಪ್ರಕ್ರಿಯೆಗಾಗಿ ಹಣ ವಸೂಲಿ ಮಾಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಣ ವಸೂಲಿ ಮಾಡುವುದು ಕಂಡುಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನ ಬಂಡಿಪಾಳ್ಯದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇ-ಕೆವೈಸಿ ಪ್ರಕ್ರಿಯೆಗಾಗಿ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಬಗ್ಗೆ ರಾಜ್ಯದ ಕೆಲವು ಭಾಗಗಳಿಂದ ದೂರುಗಳು ಬಂದಿವೆ.

ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಾಕ್ಷ್ಯಾಧಾರಗಳೊಂದಿಗೆ ದೂರು ಬಂದರೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಸಾರ್ವಜನಿಕರು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಲ್ಲಿಸಿರುವ ವಿಡಿಯೋ ಹಾಗೂ ಇತರ ಸಾಕ್ಷ್ಯಗಳ ಆಧಾರದ ಮೇಲೆ ರಾಜ್ಯದ ವಿವಿಧೆಡೆ ಸುಮಾರು 10ರಿಂದ 12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯಲೋಪ ಎಸಗಿದ ಕೆಲವು ಆಹಾರ ನಿರೀಕ್ಷಕರಿಗೂ ನೋಟಿಸ್ ನೀಡಿ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ, ಇ-ಕೆವೈಸಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆಹಾರ ಇಲಾಖೆಯ 'ಅನ್ನ ಸೇವಾ' ಆ್ಯಪ್ ಮೂಲಕ ಲಕ್ಷಾಂತರ ಫಲಾನುಭವಿಗಳು ಯಾವುದೇ ತೊಂದರೆಯಿಲ್ಲದೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಆ್ಯಪ್ನ ಜಿಯೋ-ಫೆನ್ಸಿಂಗ್ ಸೌಲಭ್ಯವನ್ನು ದೇಶಾದ್ಯಂತ ವಿಸ್ತರಿಸಲಾಗಿದೆ. ಆರಂಭದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನೂ ಪರಿಹರಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಶೇ.99ರಷ್ಟು ನ್ಯಾಯಬೆಲೆ ಅಂಗಡಿಗಳ ಮಾಲೀಕರು ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕೆಲವರ ತಪ್ಪಿನಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬರುವುದು ಸರಿಯಲ್ಲ.

ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಅಕ್ರಮದಲ್ಲಿ ಭಾಗಿಯಾದವರು ಯಾರೇ ಆಗಿದ್ದರೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande