
ಬೆಂಗಳೂರು, 16 ನವೆಂಬರ್ (ಹಿ.ಸ.):
ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಉಚ್ಚಾಟಿತ ನಾಯಕ ಕೆ.ಎಸ್. ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೆ.ಎಸ್. ಈಶ್ವರಪ್ಪ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ, ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಒದಗಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ
ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಹಾಗೂ ಸೊಸೆ ಶಾಲಿನಿ ಅವರು ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಿವಮೊಗ್ಗದ ವಕೀಲ ಬಿ. ವಿನೋದ್ ಅವರು ದೂರು ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಈ ಹಿಂದೆ ಮುಕ್ತಾಯ ವರದಿ (ಬಿ ರಿಪೋರ್ಟ್) ಸಲ್ಲಿಸಿದ್ದರು. ಆದರೆ, ದೂರುದಾರರು ಈ ವರದಿಯನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಹೊಸದಾಗಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸ ಎಫ್ಐಆರ್ ದಾಖಲಿಸಿದ್ದರು.
ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಈಶ್ವರಪ್ಪ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದರಿಂದ ಹಿನ್ನಡೆ ಅನುಭವಿಸಿದ್ದ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R