
ಶ್ರೀನಗರ, 18 ನವೆಂಬರ್ (ಹಿ.ಸ.):
ಕಾಶ್ಮೀರ ಕಣಿವೆಯಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಸ್ಥಳೀಯ ಕಮಾಂಡರ್ ಮೊಹಮ್ಮದ್ ಲತೀಫ್ ಭಟ್ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತನಾಗುತ್ತಿದ್ದಂತೆ ಜಮ್ಮುವಿನಲ್ಲಿ ಸಂಭ್ರಮಾಚರಣೆ ನಡೆಯಿತು. ಶಿವಸೇನಾ ಡೋಗ್ರಾ ಫ್ರಂಟ್ ಕಾರ್ಯಕರ್ತರು ಡೋಲು ಬಾರಿಸಿ, ಸಿಹಿ ಹಂಚುವ ಮೂಲಕ ಭದ್ರತಾ ಪಡೆಗಳ ಕಾರ್ಯಾಚರಣೆಯನ್ನು ಸಂಭ್ರಮಿಸಿದರು.
ಸಂಘಟನೆಯ ಅಧ್ಯಕ್ಷ ಅಶೋಕ್ ಗುಪ್ತಾ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ಉಗ್ರನ ಹತ್ಯೆಯನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳ ಪರವಾಗಿ ಘೋಷಣೆಗಳನ್ನು ಕೂಗಿ ಸಂಭ್ರಮ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅಶೋಕ್ ಗುಪ್ತಾ, ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಮೇಲಿನ ದಾಳಿಗೆ ಭದ್ರತಾ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ ಎಂದು ಹೇಳಿದರು. ಉಗ್ರರ ವಿರುದ್ಧ ದಿಟ್ಟ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ಧೈರ್ಯ ಹಾಗೂ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧವೂ ಟೀಕಾಪ್ರಹಾರ ನಡೆಸಿದರು.
ಕಿಶ್ತ್ವಾರ್ನಲ್ಲಿ ಇತ್ತೀಚೆಗೆ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಮೃತಪಟ್ಟಿರುವ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಉಗ್ರವಾದದ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಬುಧವಾರ ಬೆಳಗಿನ ಜಾವ ಕುಲ್ಗಾಂ ಜಿಲ್ಲೆಯ ಜಂಗಲ್ಪೋರಾ ಗ್ರಾಮದಲ್ಲಿ ಭಾರತೀಯ ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಸ್ಥಳೀಯ ಕಮಾಂಡರ್ ಮೊಹಮ್ಮದ್ ಲತೀಫ್ ಭಟ್ನನ್ನು ಹೊಡೆದುರುಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R