
ಕಲಬುರಗಿ, 18 ನವೆಂಬರ್ (ಹಿ.ಸ.):
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಡಿಸೆಂಬರ್ 10ರಂದು ಬೆಳಗಾವಿ ಚಲೋ ಹಾಗೂ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಈವರೆಗೆ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಮತ್ತೆ ಹೋರಾಟದ ಹಾದಿ ಹಿಡಿಯುವುದು ಅನಿವಾರ್ಯವಾಗಿದೆ ಎಂದರು.
ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು. ಸಮುದಾಯದ ಬೇಡಿಕೆಗೆ ಸರ್ಕಾರ ಸ್ಪಂದಿಸಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎರಡು ವರ್ಷಗಳ ಹಿಂದೆ ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಹಲ್ಲೆ ನಡೆದಿತ್ತು. ಪ್ರತಿಭಟನಾಕಾರರ ಮೇಲಿನ ದೌರ್ಜನ್ಯದ ಹಿನ್ನೆಲೆಯಲ್ಲಿ ಲಿಂಗಾಯತರ ಮೇಲಿನ ದೌರ್ಜನ್ಯ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸಭೆ ಕರೆಯುವ ಭರವಸೆ ನೀಡಿದ್ದರು. ಆದರೆ, ಈವರೆಗೆ ಸಭೆ ಕರೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಈ ಹಿಂದಿನ ಭರವಸೆಯನ್ನು ಈಡೇರಿಸಿ ಸಮುದಾಯದ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R