
ಬೆಂಗಳೂರು, 19 ನವೆಂಬರ್ (ಹಿ.ಸ.):
ರಾಜ್ಯದ ನಗರಗಳಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ನಿಯಂತ್ರಿಸಿ, ವ್ಯವಸ್ಥಿತ ನಗರಾಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಹೊಸ ನಗರ ಯೋಜನೆ ರೂಪಿಸಲಾಗುತ್ತಿದೆ. ಇದರ ಭಾಗವಾಗಿ ಶಿಸ್ತುಬದ್ಧ ರಸ್ತೆ ನಿರ್ಮಾಣಕ್ಕಾಗಿ ನೂತನ ರಸ್ತೆ ಜಾಲ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯದ ವಿವಿಧೆಡೆ ನಿರ್ಮಿಸಿರುವ 16 ಇಂದಿರಾ ಕ್ಯಾಂಟೀನ್ಗಳು ಹಾಗೂ ಸ್ವಚ್ಛ ಭಾರತ ಅಭಿಯಾನ (ನಗರ) ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಮತ್ತು ಯಂತ್ರೋಪಕರಣಗಳ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಎಲ್ಲ ನಗರಗಳಲ್ಲೂ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಯೋಜಿತ ನಗರಾಭಿವೃದ್ಧಿ ಅಗತ್ಯವಾಗಿದೆ. ಮೈಸೂರು ಮತ್ತು ಬೆಳಗಾವಿಯಲ್ಲಿ ವಿಶಾಲ ರಸ್ತೆಗಳಿವೆ. ಆದರೆ ಬೆಂಗಳೂರಿನಲ್ಲಿ ಅಂತಹ ವ್ಯವಸ್ಥೆ ಇಲ್ಲ. ನಗರಗಳನ್ನು ಪೂರ್ವಯೋಜಿತವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
ನಗರ ಯೋಜನಾ ಇಲಾಖೆಯಿಂದ ಅಗತ್ಯ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು. ಯೋಜಿತ ನಗರ ನಿರ್ಮಾಣದ ಉದ್ದೇಶದಿಂದ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ನಗರ ಯೋಜನಾ ಕಾಲೇಜು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯೂ ಪ್ರಾರಂಭವಾಗಿದೆ ಎಂದು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ
ನಗರಸಭೆ ಹಾಗೂ ಮಹಾನಗರ ಪಾಲಿಕೆಗಳಿಗೆ ಹೆಚ್ಚಿನ ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ. ಕಳೆದ ಮೂರು ವರ್ಷಗಳಿಂದ ಅನುದಾನ ಹಂಚಿಕೆಯಲ್ಲಿ ವ್ಯತ್ಯಾಸಗಳಾಗಿದ್ದರೂ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು. ಆದರೆ, ಪ್ರತಿಯೊಂದು ಪೈಸೆಗೂ ಲೆಕ್ಕ ಇರಬೇಕು. ಕೈಗೊಂಡ ಕಾಮಗಾರಿಗಳ ಛಾಯಾಚಿತ್ರ ಮತ್ತು ವಿಡಿಯೋ ದಾಖಲೆಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿ ನಡೆಸದ ರಸ್ತೆಗಳಿಗೆ ಬಿಲ್ ಮಾಡುವುದನ್ನು ಸಹಿಸುವುದಿಲ್ಲ. ಶಿವಕುಮಾರ್ ಅವರ ಮನೆಯಿಂದ ಯತೀಂದ್ರ ಅವರ ಮನೆಗೆ, ಅಲ್ಲಿಂದ ಮತ್ತೆ ಶಿವಕುಮಾರ್ ಅವರ ಮನೆಗೆ ರಸ್ತೆ ತೋರಿಸಿ ಬಿಲ್ ಮಾಡುವಂತಿಲ್ಲ ಎಂದು ಹೇಳಿದರು.
ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅಕ್ರಮ ವ್ಯವಹಾರಗಳಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಸಕರು ಅಥವಾ ನಗರಸಭಾ ಸದಸ್ಯರು ಹೇಳಿದ್ದಾರೆ ಎಂಬ ಕಾರಣಕ್ಕೆ ಕಳ್ಳಲೆಕ್ಕ ಹಾಗೂ ನಕಲಿ ಬಿಲ್ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಇಂದಿರಾ ಕ್ಯಾಂಟೀನ್ಗಳಲ್ಲಿ ಗುಣಮಟ್ಟ ಪರಿಶೀಲನೆ ಕಡ್ಡಾಯ
ಬಡವರ ತಟ್ಟೆಯಲ್ಲಿ ಅನ್ನವಿದ್ದಾಗ ಮಾತ್ರ ಅಭಿವೃದ್ಧಿಗೆ ಬೆಲೆ ಬರುತ್ತದೆ. ದುಡಿಯುವವರ ಮುಖದಲ್ಲಿ ನಗು ಮೂಡಿದಾಗ ನಮ್ಮ ಕೆಲಸ ಸಾರ್ಥಕವಾಗುತ್ತದೆ. ಹಸಿವಿಗೆ ಜಾತಿ, ಧರ್ಮದ ಭೇದವಿಲ್ಲ. ಹಸಿವಿನ ವಿಚಾರದಲ್ಲಿಯೂ ಕೆಲವರು ರಾಜಕಾರಣ ಮಾಡುತ್ತಾರೆ. ನಾವು ಆ ರೀತಿ ಮಾಡುವುದಿಲ್ಲ. ಬಿಜೆಪಿ ಮತ್ತು ಜನತಾದಳದ ಕ್ಷೇತ್ರಗಳಲ್ಲಿಯೂ ಕೆಲವು ಕಡೆ ಇಂದಿರಾ ಕ್ಯಾಂಟೀನ್ಗಳು ಸ್ಥಗಿತಗೊಂಡಿವೆ ಎಂದು ಹೇಳಿದರು.
ಇಂದಿರಾ ಕ್ಯಾಂಟೀನ್ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕೇಂದ್ರೀಕೃತ ಮೇಲ್ವಿಚಾರಣಾ ವ್ಯವಸ್ಥೆ ಜಾರಿಗೆ ತರಬೇಕು. ಇದರಿಂದ ಪ್ರತಿದಿನ ಎಷ್ಟು ಜನರು ಊಟಕ್ಕೆ ಬರುತ್ತಾರೆ ಎಂಬ ಮಾಹಿತಿ ಲಭ್ಯವಾಗಲಿದೆ. ಪ್ರತಿದಿನ ಒಬ್ಬೊಬ್ಬ ಅಧಿಕಾರಿಗಳು ಸರದಿಯಂತೆ ಕ್ಯಾಂಟೀನ್ಗೆ ಭೇಟಿ ನೀಡಿ ಊಟದ ಗುಣಮಟ್ಟ ಪರಿಶೀಲಿಸಿ ಸಹಿ ಹಾಕಬೇಕು. ಇದರಿಂದ ಆಹಾರ ಪೂರೈಕೆಯಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆ ಕಾಪಾಡಲು ಸಾಧ್ಯವಾಗುತ್ತದೆ ಎಂದರು.
ಪೌರಕಾರ್ಮಿಕರಿಗೆ ಮನೆ ನಿರ್ಮಾಣದ ಚಿಂತನೆ
ನಗರ ಸ್ವಚ್ಛತೆ ನಿರ್ವಹಣೆ ಸವಾಲಿನ ಕೆಲಸವಾಗಿದ್ದು, ಪೌರಕಾರ್ಮಿಕರು ಶ್ರಮಪಟ್ಟು ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವಚ್ಛತಾ ಕಾರ್ಯಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ಕೆಲಸದ ವೇಗ ಹೆಚ್ಚಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು ಇದಕ್ಕೆ ನೆರವಾಗಲಿವೆ ಎಂದು ತಿಳಿಸಿದರು.
ಪೌರಕಾರ್ಮಿಕರಿಗಾಗಿ ಮನೆಗಳನ್ನು ನಿರ್ಮಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಬಡವರಿಗೆ ನಿವೇಶನ ಹಂಚಿಕೆ ಮಾಡುವ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರ ನೀಡುವ ಸೌಲಭ್ಯಗಳಿಗೆ ಪ್ರತಿಯಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಷ್ಠೆಯಿಂದ ಕೆಲಸ ಮಾಡಬೇಕು. ಜನಸೇವೆ ಮಾಡಲು ದೊರೆತಿರುವ ಅವಕಾಶವನ್ನು ಆತ್ಮತೃಪ್ತಿಯಿಂದ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಗುರಿ
ಇಂದಿರಾ ಎಂದರೆ ಹಸಿವು ದೂರ, ಇಂದಿರಾ ಎಂದರೆ ಬಡತನ ದೂರ. ದೇಶದ ಹಸಿದ ಹೊಟ್ಟೆಗಳಿಗೆ ಮತ್ತು ದುಡಿಯುವ ಕೈಗಳಿಗೆ ಶಕ್ತಿ ತುಂಬಿದವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ. ದೇಶದ ಆರ್ಥಿಕತೆ, ಅಭಿವೃದ್ಧಿ ಹಾಗೂ ಸಾಮಾನ್ಯ ಜನರ ಬದುಕಿಗೆ ಬಲ ತುಂಬಿದ ಅವರ ಹೆಸರನ್ನು ಉಳಿಸಿಕೊಂಡು ಹೋಗುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿಯಾಗಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿದೆ. ಅನ್ನಭಾಗ್ಯ ಯೋಜನೆಯ ಜೊತೆಗೆ ಇಂದಿರಾ ಕ್ಯಾಂಟೀನ್ಗಳನ್ನೂ ಮುಂದುವರಿಸಲಾಗುತ್ತಿದೆ. ಬಡವರ ಹಸಿವು ನೀಗಿಸುವ ಕೆಲಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R