ಅಂಗನವಾಡಿ ಕಾಮಗಾರಿಗಳ ವಿಳಂಬಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಸಮಾಧಾನ
ಅಂಗನವಾಡಿ ಕಾಮಗಾರಿಗಳ ವಿಳಂಬಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಸಮಾಧಾನ
ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಬಾಗೇವಾಡಿ ವಿಬಿರಾಮ್ಜೀ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.


ಕೋಲಾರ, 19 ನವೆಂಬರ್ (ಹಿ.ಸ.)

ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ, ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವುದಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ತ್ವರಿತವಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಆದ್ದರಿಂದ ಕಾಮಗಾರಿಗಳನ್ನು ವಿಳಂಬ ಮಾಡದೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಅಂಗನವಾಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದಾಗ ಒಟ್ಟು ೬೬ ಕಾಮಗಾರಿಗಳ ಗುರಿ ನಿಗದಿಪಡಿಸಲಾಗಿದ್ದು, ಈ ಪೈಕಿ ೩೬ ಕಾಮಗಾರಿಗಳು ಪ್ರಗತಿಯಲ್ಲಿವೆ. ೧೯ ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನೂ ೧೧ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಕಾಮಗಾರಿಗಳನ್ನು ಪ್ರಾರಂಭಿಸದೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು ಈ ಕೂಡಲೇ ಕಾಮಗಾರಿಗಳನ್ನು ಆರಂಭಿಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಾಮಗಾರಿಗಳ ಪ್ರಗತಿ ಅತ್ಯಂತ ಕಳಪೆಯಾಗಿದೆ. ಮುಂಬರುವ ದಿನಗಳಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕಠಿಣ ಕ್ರಮಗಳನನ್ನು ಜರುಗಿಸಲಾಗುವುದೆಂದು ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ವಿಬಿಜಿ ರಾಮ್ ಜಿ ನರೇಗಾ ಯೋಜನೆಗಳಡಿ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯದಿರುವ ಕುರಿತು ಪಿಡಿಒಗಳಿಂದ ಮಾಹಿತಿ ಪಡೆದುಕೊಂಡರು. ಯೋಜನೆಗಳ ಅನುಷ್ಠಾನದಲ್ಲಿರುವ ಸಮಸ್ಯೆಗಳನ್ನು ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸುವಂತೆ ಸೂಚಿಸಿದ ಅವರು, ಈ ಸಮಸ್ಯೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಮಾನವ ದಿನಗಳ ಸೃಷ್ಟಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರತಿದಿನ ಒಟ್ಟಾರೆ ಮಾನವ ದಿನಗಳ ಸಂಖ್ಯೆಯನ್ನು ೨೦ ಸಾವಿರಕ್ಕೆ ಹೆಚ್ಚಿಸುವ ಗುರಿಯೊಂದಿಗೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ.ಕೆ. ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande