
ಗದಗ, 19 ನವೆಂಬರ್ (ಹಿ.ಸ.)
ದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಹಾಗೂ ಪೌಷ್ಟಿಕಾಂಶಯುಕ್ತ ಆಹಾರ ದೊರೆಯಬೇಕು. ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬುದು ಕರ್ನಾಟಕ ರಾಜ್ಯ ಆಹಾರ ಆಯೋಗದ ಪ್ರಮುಖ ಉದ್ದೇಶವಾಗಿದೆ ಎಂದು ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ ಹೇಳಿದರು.
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 18ರಿಂದ 20ರವರೆಗೆ ಗದಗ ಜಿಲ್ಲೆಯಲ್ಲಿ ಆಯೋಗದ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಪ್ರವಾಸದ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಆಸ್ಪತ್ರೆಗಳು, ಎಫ್ಸಿಐ ಗೋದಾಮುಗಳು, ವಿದ್ಯಾರ್ಥಿನಿಲಯಗಳು, ನ್ಯಾಯಬೆಲೆ ಅಂಗಡಿಗಳು, ಆಹಾರ ಧಾನ್ಯಗಳ ಸಗಟು ಮಳಿಗೆಗಳು ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದರು.
ಪರಿಶೀಲನೆ ವೇಳೆ ಕೆಲವು ಗೋದಾಮುಗಳಲ್ಲಿ ಅಕ್ಕಿ ದಾಸ್ತಾನು ಮತ್ತು ವಿತರಣೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬಂದಿದೆ. ಗೋದಾಮಿಗೆ ಬಂದ ಅಕ್ಕಿ, ಫಲಾನುಭವಿಗಳಿಗೆ ವಿತರಿಸಿದ ಅಕ್ಕಿ ಹಾಗೂ ಉಳಿದ ದಾಸ್ತಾನುಗಳ ಲೆಕ್ಕದಲ್ಲಿ ಹೊಂದಾಣಿಕೆ ಇಲ್ಲದಿರುವುದು ಪತ್ತೆಯಾಗಿದೆ. ಅಲ್ಲದೆ, ಅನರ್ಹ ಎಪಿಎಲ್ ಕಾರ್ಡ್ದಾರರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಕ್ರಿಯೆಯಲ್ಲಿ ನೈಜ ಬಡ ಫಲಾನುಭವಿಗಳ ಕಾರ್ಡ್ಗಳನ್ನೂ ರದ್ದುಪಡಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಕೆಲವು ಎಪಿಎಂಸಿ ಗೋದಾಮುಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಅಕ್ಕಿ ದಾಸ್ತಾನು ಇರುವುದು ಕಂಡುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಹಾಗೂ ರಾಜ್ಯ ಸರ್ಕಾರದಿಂದ 5 ಕೆಜಿ ಸೇರಿದಂತೆ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ನಿಗದಿತ ಪ್ರಮಾಣಕ್ಕಿಂತ ಕಡಿಮೆ ಅಕ್ಕಿ ವಿತರಿಸುವುದು ಅಥವಾ ಪಡಿತರ ನೀಡಲು ಹಣ ಕೇಳುವುದು ಕಂಡುಬಂದರೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಪ್ರತಿ ತಿಂಗಳು ಕನಿಷ್ಠ 26 ದಿನ ನ್ಯಾಯಬೆಲೆ ಅಂಗಡಿಗಳನ್ನು ತೆರೆದು ಸಮರ್ಪಕ ಸೇವೆ ನೀಡಬೇಕು ಎಂದು ಸೂಚಿಸಿದರು.
ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅಂಗನವಾಡಿಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದ್ದು, ಆಹಾರದ ಗುಣಮಟ್ಟ ಕಳಪೆಯಾಗಿದ್ದರೆ ಅಥವಾ ವಿತರಣೆಯಲ್ಲಿ ವಿಳಂಬವಾದರೆ ಸಾರ್ವಜನಿಕರು ಆಯೋಗಕ್ಕೆ ದೂರು ಸಲ್ಲಿಸಬಹುದು ಎಂದರು.
ಹೋಟೆಲ್, ರೆಸ್ಟೋರೆಂಟ್ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿದ್ದರೂ ಆಯೋಗದ ಗಮನಕ್ಕೆ ತರಬಹುದು. ಕೃಷಿ ಉಪಕರಣಗಳ ಸಬ್ಸಿಡಿ ವಿತರಣೆ, ಕೀಟನಾಶಕಗಳ ಪೂರೈಕೆ ಹಾಗೂ ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನದಲ್ಲಿ ಅವ್ಯವಹಾರ ನಡೆಯದಂತೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕುಂದುಕೊರತೆ ಪರಿಹಾರ ಕೋಶ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾಧಿಕಾರಿಗಳು ಇದರ ಅಧ್ಯಕ್ಷರಾಗಿರುತ್ತಾರೆ. ಸಾರ್ವಜನಿಕರು ಆಹಾರ ಮತ್ತು ಪೌಷ್ಟಿಕಾಂಶ ಯೋಜನೆಗಳಲ್ಲಿನ ಲೋಪದೋಷಗಳ ಕುರಿತು ದೂರು ಸಲ್ಲಿಸಬಹುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತರಾವ್, ಮಾರುತಿ ಎಂ. ದೊಡ್ಡಲಿಂಗಣ್ಣವರ, ಎ. ರೋಹಿಣಿ ಪ್ರಿಯ, ಕೆ.ಎಸ್. ವಿಜಯಲಕ್ಷ್ಮಿ ಹಾಗೂ ಆಹಾರ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ದೊಡ್ಡಮನಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP