
ಗದಗ, 19 ನವೆಂಬರ್ (ಹಿ.ಸ.)
ಗದಗ ಜಿಲ್ಲೆಯಲ್ಲಿ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಬೆಳೆಗಳ ರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ರಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಜಿಲ್ಲೆಯ ಮಳೆ ಪ್ರಮಾಣ, ಮಳೆ ಕೊರತೆ, ಅಂತರ್ಜಲ ಮಟ್ಟ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಬರ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯಿರುವ ಗ್ರಾಮಗಳು ಹಾಗೂ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ, ಪರ್ಯಾಯ ನೀರಿನ ಮೂಲಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಕೆರೆಗಳು ಹಾಗೂ ಕುಡಿಯುವ ನೀರಿನ ಮೂಲಗಳನ್ನು ಗುರುತಿಸಿ, ಅವುಗಳಲ್ಲಿನ ಹೂಳು ತೆಗೆಯುವುದು, ಸ್ವಚ್ಛಗೊಳಿಸುವುದು ಹಾಗೂ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಂಡು ನೀರಿನ ಸಂಗ್ರಹ ಮತ್ತು ಲಭ್ಯತೆ ಹೆಚ್ಚಿಸಲು ಕ್ರಮವಹಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಮೂಲಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ದುರಸ್ತಿಯಲ್ಲಿರುವ ಕೊಳವೆಬಾವಿ, ಕೈಪಂಪ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತ್ವರಿತವಾಗಿ ದುರಸ್ತಿಗೊಳಿಸಬೇಕು.ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮವಹಿಸಬೇಕು. ಅಲ್ಲದೆ, ನೀರಿನ ಮಿತವ್ಯಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವು ಸರಾಸರಿ 5 ಮೀಟರ್ಗಳಷ್ಟು ಕುಸಿತ ಕಂಡಿರುವುದು ಆತಂಕಕಾರಿ ಸಂಗತಿಯಾಗಿದೆ. ವಿಶೇಷವಾಗಿ ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕುಗಳ ಕೆಲವು ಭಾಗಗಳಲ್ಲಿ ಅಂತರ್ಜಲ ಮಟ್ಟದಲ್ಲಿ ಹೆಚ್ಚಿನ ಪ್ರಮಾಣದ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ವೃದ್ಧಿಗೆ ಜಿಲ್ಲೆಯ ಪ್ರಮುಖ ಕೆರೆಗಳನ್ನು ಗುರುತಿಸಿ ಅವುಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಭೀಷ್ಮ ಕೆರೆ, ಡಂಬಳ ಹಾಗೂ ಜಂತ್ಲಿ ಶಿರೂರು ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ ಸಾಧ್ಯತೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕೆರೆಗಳ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳಬೇಕು. ಲಭ್ಯವಿರುವ ಜಲಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ ಸೂಕ್ತ ಯೋಜನೆ ರೂಪಿಸಬೇಕು ಎಂದರು.
ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಲಭ್ಯವಿರುವ ಮೇವು ಪ್ರಮಾಣ ಹಾಗೂ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಬೇಡಿಕೆಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್ ಸ್ಥಾಪನೆಗೆ ಕ್ರಮ ವಹಿಸಬೇಕು. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶುವೈದ್ಯಕೀಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸೂಚಿಸಿದರು.
ಮಳೆ ಕೊರತೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಪರಿಶೀಲಿಸಬೇಕು. ಬೆಳೆ ಹಾನಿಗೊಳಗಾದ ಪ್ರದೇಶಗಳ ವಿವರಗಳನ್ನು ಸಮಗ್ರವಾಗಿ ಸಂಗ್ರಹಿಸಿ, ಸರ್ಕಾರದ ಮಾರ್ಗಸೂಚಿಗಳನ್ವಯ ಮುಂದಿನ ಕ್ರಮ ಕೈಗೊಳ್ಳಬೇಕು. ರೈತರ ತಂತ್ರಾಂಶದ ನೋಂದಣಿ ವಿವರಗಳನ್ನು ಪರಿಶೀಲಿಸಿ, ಅರ್ಹ ರೈತರಿಗೆ ಬರ ಪರಿಹಾರ ವಿತರಿಸುವ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಬರ ಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗದ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿಬಿ–ಜಿ ರಾಮ್ ಜಿ ಯೋಜನೆಯಡಿ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಅರ್ಹ ಕಾರ್ಮಿಕರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗದ ಬೇಡಿಕೆ ಕುರಿತು ಮಾಹಿತಿ ಸಂಗ್ರಹಿಸಿ, ಅಗತ್ಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸುವ ಮೂಲಕ ಗ್ರಾಮೀಣ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸೂಚನೆ
ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು. ಕುಡಿಯುವ ನೀರು, ಜಾನುವಾರುಗಳ ಮೇವು, ಕೃಷಿ ಚಟುವಟಿಕೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಪರಿಹಾರ ಕಲ್ಪಿಸಬೇಕು. ಯಾವುದೇ ತುರ್ತು ಸಮಸ್ಯೆಗಳು ಎದುರಾದಲ್ಲಿ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ವರದಿಯನ್ನು ಕಾಲಕಾಲಕ್ಕೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೆಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP