
ಬೆಂಗಳೂರು, 02 ನವೆಂಬರ್ (ಹಿ.ಸ.):
ರಾಜ್ಯದಲ್ಲಿ ಚಳಿಯ ಆರಂಭದ ಮುನ್ಸೂಚನೆ ಬೆನ್ನಲ್ಲೇ ಮುಂದಿನ ಕೆಲವು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದು (ನವೆಂಬರ್ 2) ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ನವೆಂಬರ್ 5ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯ ಸಾಧ್ಯತೆಯೂ ಇದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ನವೆಂಬರ್ 5ರವರೆಗೆ ಗುಡುಗು-ಮಿಂಚಿನ ಸಾಧ್ಯತೆ
ನವೆಂಬರ್ 5ರವರೆಗೆ ರಾಜ್ಯದ ವಿವಿಧೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಅಲ್ಲಲ್ಲಿ ಗುಡುಗು ಮತ್ತು ಮಿಂಚು ಸಂಭವಿಸಬಹುದು. ಹೀಗಾಗಿ ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ ಹಾಗೂ ವಿದ್ಯುತ್ ಕಂಬಗಳ ಸಮೀಪ ಆಶ್ರಯ ಪಡೆಯದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R