
ಬಳ್ಳಾರಿ, 20 ನವೆಂಬರ್ (ಹಿ.ಸ.)
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯಿಂದ ಶುಕ್ರವಾರ ಬಳ್ಳಾರಿ ನಗರದ ವಿವಿಧ ಕಡೆಗಳಲ್ಲಿ ದಿಢೀರ್ ತಪಾಸಣೆ ನಡೆಸಿ, 9 ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ ಹೊಸಮನೆ ಹಾಗೂ ತಹಶೀಲ್ದಾರ್ ನರಸಪ್ಪ ಅವರ ಅಧ್ಯಕ್ಷತೆಯಲ್ಲಿ ಮೊದಲು ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಲಾಯಿತು. ಬಳಿಕ ನಗರದ ರೂಪನಗುಡಿ ರಸ್ತೆ, ಕೊಲ್ಮಿ ಬಜಾರ್, ಕಣೇಕಲ್ ಬಸ್ ನಿಲ್ದಾಣ, ಆಂಧ್ರಾಳ್ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿರುವ ಉದ್ದಿಮೆಗಳ ಮೇಲೆ ತಪಾಸಣೆ ಕೈಗೊಳ್ಳಲಾಯಿತು.
ತಪಾಸಣೆ ವೇಳೆ ಮಕ್ಕಳು ದುಡಿಯುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲೇ 09 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ವಶಕ್ಕೆ ಪಡೆದು, ಅವರಿಂದ ಹೇಳಿಕೆ ದಾಖಲಿಸಿಕೊಂಡು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ಅಲ್ಲದೆ, ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್ಗಳನ್ನು ವಿತರಿಸಿ ಬಾಲಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ಪರಶುರಾಮ್ (2ನೇ ವೃತ್ತ), ರಮೇಶ್ (1ನೇ ವೃತ್ತ, ಬಳ್ಳಾರಿ), ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮೌನೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ಶ್ರೀದೇವಿ, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನಿಲೋಫಿಯಾ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಚಂದ್ರಕಲಾ, ರೀಚ್ ಸಂಸ್ಥೆಯ ಸಂಯೋಜಕ ಹನುಮಂತಪ್ಪ, ಪ್ಯಾರಾ ಲೀಗಲ್ ಸ್ವಯಂ ಸೇವಕಿ ಲಕ್ಷ್ಮೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್