ವಿಬಿಜಿ ರಾಮ್ ಜಿ ಯೋಜನೆಯಡಿ 175 ದಿನ ಕೆಲಸಕ್ಕೆ ಕೇಂದ್ರಕ್ಕೆ ಪತ್ರ: ಸಚಿವ ಈಶ್ವರ ಖಂಡ್ರೆ
ಗದಗ, 21 ನವೆಂಬರ್ (ಹಿ.ಸ.) ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಗ್ರಾಮೀಣ ಜನರು ಕೆಲಸ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ವಿಬಿಜಿ ರಾಮ್ಜಿ ಯೋಜನೆಯಡಿ ನಿರಂತರ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಪ್ರತಿ ಜಾಬ್ಕಾರ್ಡ್ಗೆ ವರ್ಷಕ್ಕೆ 1
ಫೋಟೋ


ಗದಗ, 21 ನವೆಂಬರ್ (ಹಿ.ಸ.)

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಗ್ರಾಮೀಣ ಜನರು ಕೆಲಸ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ವಿಬಿಜಿ ರಾಮ್ಜಿ ಯೋಜನೆಯಡಿ ನಿರಂತರ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಪ್ರತಿ ಜಾಬ್ಕಾರ್ಡ್ಗೆ ವರ್ಷಕ್ಕೆ 125 ದಿನಗಳ ಕೆಲಸ ನಿಗದಿಪಡಿಸಲಾಗಿದ್ದು, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಕೂಲಿಕಾರ್ಮಿಕರ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ 50 ದಿನ ಸೇರಿಸಿ ಒಟ್ಟು 175 ದಿನ ಕೆಲಸ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ಗದಗ ತಾಲೂಕು ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮ ಪಂಚಾಯಿತಿಯ ತಾಂಡಾ ರಸ್ತೆಯಲ್ಲಿರುವ ಚೆಕ್ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿಕಾರ್ಮಿಕರೊಂದಿಗೆ ಚರ್ಚಿಸಿದ ಅವರು, ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗದ ಭದ್ರತೆ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಕೇಂದ್ರ ಸರ್ಕಾರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರೆ ಪ್ರತಿ ಜಾಬ್ಕಾರ್ಡ್ಗೆ 175 ದಿನಗಳ ಉದ್ಯೋಗ ಕಲ್ಪಿಸಲು ಸಾಧ್ಯವಾಗಲಿದೆ ಎಂದರು.

ಕಂದಕ ಬದು ನಿರ್ಮಾಣಕ್ಕೆ ಅವಕಾಶ

ರೈತರು ಹಾಗೂ ಕೂಲಿಕಾರ್ಮಿಕರಿಗೆ ಅನುಕೂಲವಾಗುವಂತೆ ತಮ್ಮ ಜಮೀನುಗಳಲ್ಲಿ ಕಂದಕ ಬದು ನಿರ್ಮಾಣ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ರೈತರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪೂರ್ಣಗೊಂಡ ಕೃಷಿ ಹೊಂಡ ಕಾಮಗಾರಿಯ ಛಾಯಾಚಿತ್ರಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನಷ್ಟು ಕೃಷಿ ಹೊಂಡ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಕೂಲಿಕಾರ್ಮಿಕರು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ಬಿವೈ), ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) ಹಾಗೂ ಅಟಲ್ ಪಿಂಚಣಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಡಿಜಿಟಲ್ ಆಸ್ತಿ ದಾಖಲೆ ಹಸ್ತಾಂತರ

ಕರ್ನಾಟಕ ಸರ್ಕಾರದ ಭೂ ಗ್ಯಾರಂಟಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಡಿಜಿಟಲ್ ದಾಖಲೆ ಒದಗಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪ್ರತಿದಿನ ಸರ್ವೆ ಕಾರ್ಯ ನಡೆಸುತ್ತಿದ್ದಾರೆ. ಗ್ರಾಮಸ್ಥರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಇಬ್ಬರು ಫಲಾನುಭವಿಗಳಿಗೆ ಡಿಜಿಟಲ್ ಆಸ್ತಿ ದಾಖಲೆ ಪತ್ರಗಳನ್ನು ಹಸ್ತಾಂತರಿಸಿದರು.

ಸಲಾಕೆ ಹಿಡಿದು ಕೂಲಿಕಾರರಿಗೆ ಪ್ರೋತ್ಸಾಹ

ಚೆಕ್ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಈಶ್ವರ ಬಿ. ಖಂಡ್ರೆ ಅವರು ಸ್ವತಃ ಸಲಾಕೆ ಹಿಡಿದು ಮಣ್ಣು ತುಂಬುವ ಮೂಲಕ ಕೂಲಿಕಾರ್ಮಿಕ ಮಹಿಳೆಯರನ್ನು ಪ್ರೋತ್ಸಾಹಿಸಿದರು. ಶ್ರಮಜೀವಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜಿನಗಿ, ಸಹಾಯಕ ನಿರ್ದೇಶಕ ಕುಮಾರ ಪೂಜಾರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಲಮಾಣಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande