ಮಂಡ್ಯದ ಋಣ ತೀರಿಸದೆ ಮಣ್ಣಿಗೆ ಹೋಗುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ARAI ಕೇಂದ್ರ ಸ್ಥಾಪನೆಗೆ ಭೂಮಿ ನೀಡದೆ ರಾಜ್ಯ ಸರ್ಕಾರದಿಂದ ರಾಜಕೀಯ; 20ರಿಂದ 25 ಸಾವಿರ ಕುಟುಂಬಗಳಿಗೆ ಉದ್ಯೋಗ ಸೃಷ್ಟಿಸುವ ಯೋಜನೆಗೆ ಅಡ್ಡಿ ಆರೋಪ
hd-kumaraswamy-vows-to-repay-mandya-debt-arai-centre-land-row


ಮಂಡ್ಯ, 21 ನವೆಂಬರ್ (ಹಿ.ಸ.):

ಮಂಡ್ಯ ಜಿಲ್ಲೆಯ ಅಭಿವೃದ್ಧಿ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ತಮ್ಮಿಂದ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಮಂಡ್ಯದ ಋಣ ತೀರಿಸದೆ ನಾನು ಮಣ್ಣಿಗೆ ಹೋಗುವುದಿಲ್ಲ ಎಂದು ಭಾವುಕರಾಗಿ ನುಡಿದ ಅವರು, ಜಿಲ್ಲೆಯ ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮಂಡ್ಯ ತಾಲೂಕಿನ ಹೊಳಲು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಪರೀಕ್ಷಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಭೂಮಿ ನೀಡದೆ ವಿಳಂಬ ಮಾಡುತ್ತಿದೆ. ಕಳೆದ ಒಂದೂವರೆ ವರ್ಷದಿಂದ ರಾಜಕೀಯ ದುರುದ್ದೇಶದಿಂದ ಭೂ ಮಂಜೂರಾತಿ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

ಮಾನೇಸರ್, ಪುಣೆ, ಚೆನ್ನೈ ಮತ್ತು ಭೋಪಾಲ್ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ARAI ಟೆಸ್ಟಿಂಗ್ ಸೆಂಟರ್ ಸ್ಥಾಪಿಸುವ ಉದ್ದೇಶವಿದೆ. ಇದಕ್ಕಾಗಿ 100 ಎಕರೆ ಹಾಗೂ ಎಲೆಕ್ಟ್ರಿಕ್ ವಾಹನ ಘಟಕ ಸ್ಥಾಪನೆಗೆ ಹೆಚ್ಚುವರಿಯಾಗಿ 60 ಎಕರೆ ಸರ್ಕಾರಿ ಭೂಮಿಯನ್ನು ಕೇಳಲಾಗಿದೆ.

ಈ ಯೋಜನೆಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಒಪ್ಪಿಗೆ ದೊರೆತಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಗೆ 1,000 ಎಕರೆವರೆಗೂ ಭೂಮಿ ಅಗತ್ಯವಾಗಬಹುದು ಎಂದು ತಿಳಿಸಿದರು.

ಈ ಯೋಜನೆ ಸಾಕಾರಗೊಂಡರೆ ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ವೇಗ ದೊರೆಯುವುದಲ್ಲದೆ, ಸುಮಾರು 20ರಿಂದ 25 ಸಾವಿರ ಕುಟುಂಬಗಳಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.

ಆದರೆ, ರಾಜ್ಯ ಸರ್ಕಾರ ಭೂಮಿ ನೀಡದೆ ಸತಾಯಿಸುತ್ತಿರುವುದು ವಿಷಾದನೀಯ. ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯವಾಗಿದೆ ಎಂದು ಟೀಕಿಸಿದರು.

ನಾನು ಭತ್ತ, ಅಡಿಕೆ ಅಥವಾ ಬಾಳೆ ಬೆಳೆಯುವ ಫಲವತ್ತಾದ ಕೃಷಿ ಭೂಮಿಯನ್ನು ಕೇಳುತ್ತಿಲ್ಲ. ಮಳೆ ಆಶ್ರಿತ ಬಂಜರು ಭೂಮಿಯನ್ನು ಮಾತ್ರ ಕೇಳುತ್ತಿದ್ದೇನೆ. ರೈತರನ್ನು ಒಕ್ಕಲೆಬ್ಬಿಸಿ ಭೂಮಿ ಪಡೆಯುವ ಉದ್ದೇಶವೂ ಇಲ್ಲ.

ರೈತರು ದೊಡ್ಡ ಮನಸ್ಸು ಮಾಡಿ ಬಂಜರು ಭೂಮಿ ನೀಡಿದರೆ ಮಂಡ್ಯದಲ್ಲಿ ದೊಡ್ಡ ಪ್ರಮಾಣದ ಕೈಗಾರಿಕೆಗಳನ್ನು ಸ್ಥಾಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಆಂಧ್ರಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಕೈಗಾರಿಕೆಗಳಿಗೆ ಶೇ.50ರಿಂದ ಶೇ.80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ ಕಂಪನಿಗಳು ರಾಜ್ಯಕ್ಕೆ ಬರಲು ಹಿಂದೇಟು ಹಾಕುತ್ತಿವೆ. ಉದ್ಯಮಸ್ನೇಹಿ ವಾತಾವರಣವನ್ನು ರಾಜ್ಯ ಸರ್ಕಾರವೇ ಹಾಳು ಮಾಡುತ್ತಿದೆ ಎಂದು ಆರೋಪಿಸಿದರು.

ಮಂಡ್ಯ ಜಿಲ್ಲೆಯ ಜನರು ತಮ್ಮ ಮೇಲೆ ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸವನ್ನು ಸ್ಮರಿಸಿದ ಕುಮಾರಸ್ವಾಮಿ, ನಾನು ಮತ ಕೇಳಲು ಬರದಿದ್ದರೂ ಜಿಲ್ಲೆಯ ಜನರು ಎರಡೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ ದೆಹಲಿಗೆ ಕಳುಹಿಸಿದ್ದೀರಿ.

ನಿಮ್ಮ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ. ನಾನು ಮಣ್ಣಿಗೆ ಹೋಗುವುದರೊಳಗೆ ಮಂಡ್ಯ ಜಿಲ್ಲೆ ಹಾಗೂ ರಾಜ್ಯದ ಋಣವನ್ನು ತೀರಿಸುತ್ತೇನೆ ಎಂದು ಭಾವುಕರಾಗಿ ಹೇಳಿದರು.

ಕಾರ್ಯಕ್ರಮವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮನ್ಮುಲ್ ನಿರ್ದೇಶಕ ಡಾಲು ರವಿ, ರಾಮಚಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

--------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande