ಬೆಲೆ ಏರಿಕೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಅಗತ್ಯ ವಸ್ತುಗಳು, ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹಿಸಿದರು.
BJP Protests Against Price Hike in Mandya, Targets Congress Government


ಮಂಡ್ಯ, 23 ನವೆಂಬರ್ (ಹಿ.ಸ.):

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದು, ಬಡವರು ಮತ್ತು ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಸ್ ಪ್ರಯಾಣ ದರ, ಹಾಲು, ಮೊಸರು ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಸಾರಿಗೆ ಪ್ರಯಾಣವೂ ದುಬಾರಿಯಾಗಿದೆ. ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಮುಖ್ಯಮಂತ್ರಿ ನಿರ್ಲಕ್ಷ್ಯ ತೋರಿದ್ದಾರೆ. ರೈತರಿಗೆ ಸಮರ್ಪಕ ಪರಿಹಾರ ನೀಡಿಲ್ಲ. ಮತ್ತೊಂದೆಡೆ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

'ಸಾರಿಗೆ ಪ್ರಯಾಣ ದುಬಾರಿ, ಕಾಂಗ್ರೆಸ್ಗೆ ಕಟ್ಟಬೇಕಿದೆ ಸಮಾಧಿ', 'ಕಿತ್ತು ತಿನ್ನೋ ಕಿತ್ತೋದ್ ಸರ್ಕಾರ' ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮುಂದಿನ ದಿನಗಳಲ್ಲಿ ಜನರೇ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಮ್, ಸಿಟಿ ಮಂಜುನಾಥ್, ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ಬಿಜೆಪಿ ಮುಖಂಡ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande