ಮತದಾರರ ಪಟ್ಟಿ ಅಕ್ರಮ ಆರೋಪ: ನಾಳೆ ದೇಶಾದ್ಯಂತ ಕಾಂಗ್ರೆಸ್ನಿಂದ ಸಂವಿಧಾನ ರಕ್ಷಾ ಪಾದಯಾತ್ರೆ
ನವದೆಹಲಿ, 25 ನವೆಂಬರ್ (ಹಿ.ಸ.): ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ನವೆಂಬರ್ 26ರಂದು ಸಂವಿಧಾನ ದಿನದ ಅಂಗವಾಗಿ ದೇಶಾದ್ಯಂತ ‘ಸಂವಿಧಾನ ರಕ್ಷಾ ಪಾದಯಾತ್ರೆ’ ಹಮ್ಮಿಕೊಂಡಿದೆ. ಕಾಂಗ್ರೆಸ್ ಪ
कांग्रेस महासचिव (संगठन) केसी वेणुगोपाल (फाइल फोटो)।


ನವದೆಹಲಿ, 25 ನವೆಂಬರ್ (ಹಿ.ಸ.):

ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ನವೆಂಬರ್ 26ರಂದು ಸಂವಿಧಾನ ದಿನದ ಅಂಗವಾಗಿ ದೇಶಾದ್ಯಂತ ‘ಸಂವಿಧಾನ ರಕ್ಷಾ ಪಾದಯಾತ್ರೆ’ ಹಮ್ಮಿಕೊಂಡಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮಂಗಳವಾರ ಈ ಕುರಿತು ಹೇಳಿಕೆ ನೀಡಿದ್ದು, ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಬೃಹತ್ ಪಾದಯಾತ್ರೆಗಳನ್ನು ಆಯೋಜಿಸಲಿವೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲಖನೌದಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳು, ಯುವಕರು, ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಮನವಿ ಮಾಡಿದೆ.

ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನಕ್ಕೆ ಸಂಬಂಧಿಸಿದ ದಾಖಲೆಗಳನ್ನು ದೇಶದ ಮುಂದಿಟ್ಟಿದ್ದಾರೆ ಎಂದು ವೇಣುಗೋಪಾಲ್ ಹೇಳಿದ್ದಾರೆ. ಕರ್ನಾಟಕದ ಮಹದೇವಪುರದಲ್ಲಿ ನಕಲಿ ಮತ್ತು ದ್ವಿಪ್ರವೇಶಗಳು, ಆಳಂದದಲ್ಲಿ ಸಾವಿರಾರು ನೈಜ ಮತದಾರರ ಹೆಸರುಗಳನ್ನು ಅಳಿಸುವ ವ್ಯವಸ್ಥಿತ ಪ್ರಯತ್ನಗಳು ಹಾಗೂ ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ನಡೆದ ಗಂಭೀರ ಅಕ್ರಮಗಳನ್ನು ಅವರು ಉಲ್ಲೇಖಿಸಿದ್ದಾರೆ. ಇವೆಲ್ಲವೂ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ತಿರುಚುವಿಕೆ ನಡೆದಿರುವುದನ್ನು ಸೂಚಿಸುತ್ತವೆ ಎಂದು ಆರೋಪಿಸಿದ್ದಾರೆ.

ಈ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವ ಬದಲು ಚುನಾವಣಾ ಆಯೋಗವು ಕಾಂಗ್ರೆಸ್ ಮುಂದಿಟ್ಟಿರುವ ಅಂಶಗಳನ್ನು ತಳ್ಳಿಹಾಕಿದೆ. ವಿರೋಧ ಪಕ್ಷದ ನಾಯಕನಿಂದ ಪ್ರಮಾಣಪತ್ರ ಕೇಳಿದೆ ಹಾಗೂ ತನಿಖಾ ಸಂಸ್ಥೆಗಳು ಕೇಳಿದ ಮಾಹಿತಿಯನ್ನೂ ಹಂಚಿಕೊಂಡಿಲ್ಲ ಎಂದು ಅವರು ದೂರಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಮುನ್ನ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಿತ್ತು. ಎರಡನೇ ಹಂತದಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಾಗೂ ಮೂರನೇ ಹಂತದಲ್ಲಿ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಪ್ರಕ್ರಿಯೆ ವಿಸ್ತರಿಸಿದೆ. ಮತದಾರರ ಪಟ್ಟಿಗಳನ್ನು ಶುದ್ಧೀಕರಿಸುವುದು ಇದರ ಉದ್ದೇಶವೆಂದು ಹೇಳಲಾಗಿದ್ದರೂ, ನಾಗರಿಕರು ತಮ್ಮ ಅರ್ಹತೆಯನ್ನು ಸಾಬೀತುಪಡಿಸುವ ಅನಿವಾರ್ಯತೆ ಎದುರಾಗಿದೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.

ಬಿಹಾರದ ಕರಡು ಮತದಾರರ ಪಟ್ಟಿಯಿಂದಲೇ 65 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ತೆಗೆದುಹಾಕಲಾಗಿದೆ. ಮೂರು ಹಂತಗಳ ಪ್ರಕ್ರಿಯೆಯಲ್ಲಿ ಒಟ್ಟಾರೆ 13 ಕೋಟಿಗೂ ಹೆಚ್ಚು ಹೆಸರುಗಳನ್ನು ತೆಗೆದುಹಾಕುವ ಸಾಧ್ಯತೆಯಿದೆ ಎಂದು ಅವರು ಅಂದಾಜಿಸಿದ್ದಾರೆ.

ಈ ಪ್ರಕ್ರಿಯೆಯಿಂದ ಬಡವರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ವಲಸೆ ಕಾರ್ಮಿಕರು ಹಾಗೂ ಮದುವೆಯ ನಂತರ ಮನೆ ಬದಲಾಯಿಸುವ ಮಹಿಳೆಯರು ಹೆಚ್ಚು ತೊಂದರೆಗೊಳಗಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ವರ್ಗಗಳ ಜನರಿಗೆ ಹಕ್ಕುಗಳನ್ನು ದೊರಕಿಸಿಕೊಡಲು ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಹೋರಾಡಿದ್ದರು ಎಂದು ಸ್ಮರಿಸಿದ್ದಾರೆ. ಚುನಾವಣಾ ಆಯೋಗದ ಸ್ವಾಯತ್ತತೆಯ ಬಗ್ಗೆಯೂ ಪ್ರಶ್ನಿಸಿರುವ ಅವರು, ಆಯೋಗದ ಪ್ರಸ್ತುತ ಕಾರ್ಯವೈಖರಿ ರಾಜಿ ಮಾಡಿಕೊಂಡಿರುವ ಸ್ಥಿತಿಯಲ್ಲಿದೆ ಎಂದು ಟೀಕಿಸಿದ್ದಾರೆ.

ಸಂವಿಧಾನದ ಪೀಠಿಕೆ ಸಾಮೂಹಿಕ ಪಠಣ

ಡಾ.ಬಿ.ಆರ್. ಅಂಬೇಡ್ಕರ್ ಅಥವಾ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಗೌರವ ಸಲ್ಲಿಸುವ ಮೂಲಕ ಪಾದಯಾತ್ರೆ ಆರಂಭವಾಗಲಿದೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಗರಿಕರು ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಪಠಿಸಲಿದ್ದಾರೆ. ನಂತರ ಸಂವಿಧಾನದ ರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ.

ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ಸಂವಿಧಾನಾತ್ಮಕ ಮೌಲ್ಯಗಳ ಬದ್ಧತೆಯನ್ನು ಪುನರುಚ್ಚರಿಸುವುದು ಈ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande