
ನವದೆಹಲಿ, 26 ನವೆಂಬರ್ (ಹಿ.ಸ.):
ದೇಶದಲ್ಲಿ ಬಾಲ್ಯವಿವಾಹದ ಅನಿಷ್ಟ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಆರಂಭಿಸಲಾದ ‘ಬಾಲ್ಯವಿವಾಹ ಮುಕ್ತ ಭಾರತ’ ಅಭಿಯಾನಕ್ಕೆ ಎರಡು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನವೆಂಬರ್ 27ರಂದು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಆಯೋಜಿಸಲಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ವಿವಿಧ ಸಂಸ್ಥೆಗಳು ಹಾಗೂ ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಚಿವಾಲಯದ ಪ್ರಕಾರ, 2024ರ ನವೆಂಬರ್ 27ರಂದು ಈ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಸರ್ಕಾರ ಮತ್ತು ಸಮಾಜದ ಎಲ್ಲ ವರ್ಗಗಳ ಸಾಮೂಹಿಕ ಸಹಭಾಗಿತ್ವದ ಮೂಲಕ ದೇಶದಿಂದ ಬಾಲ್ಯವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವುದು, ಸಮುದಾಯಗಳನ್ನು ಸಕ್ರಿಯಗೊಳಿಸುವುದು ಮತ್ತು ಬಾಲ್ಯವಿವಾಹ ತಡೆಗಟ್ಟುವ ಸಾಂಸ್ಥಿಕ ವ್ಯವಸ್ಥೆಯನ್ನು ಬಲಪಡಿಸುವುದಕ್ಕೆ ಆದ್ಯತೆ ನೀಡಲಾಗಿದೆ.
ರಾಷ್ಟ್ರೀಯ ಕಾರ್ಯಕ್ರಮದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು, ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳ ಅಧಿಕಾರಿಗಳು, ಬಾಲ್ಯವಿವಾಹ ನಿಷೇಧ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿಗಳ ಸದಸ್ಯರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರತಿನಿಧಿಗಳು, ನಾಗರಿಕ ಸಮಾಜದ ಸಂಘಟನೆಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಅಭಿಯಾನದಡಿ ಈವರೆಗೆ ಸಾಧಿಸಿರುವ ಪ್ರಗತಿಯನ್ನು ಪರಿಶೀಲಿಸಲಾಗುತ್ತದೆ. ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಇತರರ ಕೊಡುಗೆಗಳನ್ನು ಗುರುತಿಸಿ ಗೌರವಿಸಲಾಗುತ್ತದೆ. ಬಾಲ್ಯವಿವಾಹ ತಡೆಗಟ್ಟಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಪ್ರದರ್ಶಿಸಲಾಗುತ್ತದೆ. ಅಲ್ಲದೆ, ಈ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ನವೆಂಬರ್ 27ನ್ನು ಬಾಲ್ಯವಿವಾಹ, ಅಪ್ರಾಪ್ತ ವಯಸ್ಸಿನ ವಿವಾಹ ಮತ್ತು ಬಲವಂತದ ವಿವಾಹಗಳ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನವನ್ನಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಕ್ಕೆ ವಿಶೇಷ ಮಹತ್ವ ದೊರೆತಿದೆ.
ಅಭಿಯಾನದಡಿ ಈವರೆಗೆ ದೇಶಾದ್ಯಂತ ಜಾಗೃತಿ ಕಾರ್ಯಕ್ರಮಗಳು, ಸಮುದಾಯ ಸಂಪರ್ಕ ಅಭಿಯಾನಗಳು ಹಾಗೂ ಬಾಲ್ಯವಿವಾಹದ ವಿರುದ್ಧ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬಾಲ್ಯವಿವಾಹ ನಿಷೇಧ ಅಧಿಕಾರಿಗಳ ಕಾರ್ಯವ್ಯಾಪ್ತಿಯನ್ನು ಬಲಪಡಿಸುವುದು, ಇಂತಹ ಘಟನೆಗಳ ಕುರಿತು ಸಕಾಲದಲ್ಲಿ ಮಾಹಿತಿ ನೀಡುವ ವ್ಯವಸ್ಥೆ ರೂಪಿಸುವುದು ಹಾಗೂ ಹೆಣ್ಣುಮಕ್ಕಳ ಶಿಕ್ಷಣ, ಸಬಲೀಕರಣ ಮತ್ತು ಉತ್ತಮ ಭವಿಷ್ಯಕ್ಕೆ ಉತ್ತೇಜನ ನೀಡುವುದಕ್ಕೂ ಒತ್ತು ನೀಡಲಾಗಿದೆ.
ಅಭಿಯಾನದ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ವಿಶೇಷ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸುವಂತೆ ಸಚಿವಾಲಯ ಮನವಿ ಮಾಡಿದೆ. ಪಂಚಾಯತ್ ರಾಜ್ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಯುವಜನರು, ಸಮುದಾಯ ಮತ್ತು ಧಾರ್ಮಿಕ ಮುಖಂಡರು, ಸಾಮಾಜಿಕ ಸಂಘಟನೆಗಳು ಹಾಗೂ ಸಾರ್ವಜನಿಕರನ್ನು ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ.
ವಿಶೇಷ ಗ್ರಾಮಸಭೆಗಳು, ಜಾಗೃತಿ ಅಭಿಯಾನಗಳು, ಬಾಲ್ಯವಿವಾಹದ ವಿರುದ್ಧ ಪ್ರತಿಜ್ಞಾ ಸ್ವೀಕಾರ ಹಾಗೂ ಅಂತರ್ಜಾಲ ಮಾಧ್ಯಮಗಳ ಮೂಲಕ ಜನರನ್ನು ತೊಡಗಿಸಿಕೊಳ್ಳುವ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರೋತ್ಸಾಹಿಸಲಾಗುತ್ತಿದೆ. ಸ್ಥಳೀಯ ಮಟ್ಟದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿ, ಸಾಮೂಹಿಕ ಪ್ರಯತ್ನಗಳ ಮೂಲಕ ಬಾಲ್ಯವಿವಾಹ ತಡೆಗಟ್ಟುವುದು ಇದರ ಉದ್ದೇಶವಾಗಿದೆ.
ಬಾಲ್ಯವಿವಾಹ ಮುಕ್ತ ಭಾರತ ಅಂತರ್ಜಾಲ ತಾಣದ ಮೂಲಕ ಸಾರ್ವಜನಿಕರು ಬಾಲ್ಯವಿವಾಹ ಘಟನೆಗಳ ಕುರಿತು ದೂರು ಸಲ್ಲಿಸಬಹುದು. ಈ ತಾಣದಲ್ಲಿ ಬಾಲ್ಯವಿವಾಹ ನಿಷೇಧ ಅಧಿಕಾರಿಗಳ ವಿವರಗಳೂ ಲಭ್ಯವಿವೆ. ಜತೆಗೆ ಜಾಗೃತಿ ಚಟುವಟಿಕೆಗಳ ಮಾಹಿತಿಯನ್ನು ದಾಖಲಿಸಲು ಹಾಗೂ ಬಾಲ್ಯವಿವಾಹದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.
ಅಭಿಯಾನದಲ್ಲಿ ಕೈಜೋಡಿಸುವಂತೆ ಸಾರ್ವಜನಿಕರು ಮತ್ತು ವಿವಿಧ ಸಂಸ್ಥೆಗಳಿಗೆ ಸಚಿವಾಲಯ ಮನವಿ ಮಾಡಿದೆ. ಬಾಲ್ಯವಿವಾಹ ಮುಕ್ತ ಭಾರತ ಅಂತರ್ಜಾಲ ತಾಣ, ಮೈಗವ್ ಮತ್ತು ಮೈ ಭಾರತ್ ವೇದಿಕೆಗಳ ಮೂಲಕ ಅಭಿಯಾನದಲ್ಲಿ ಭಾಗವಹಿಸಿ, ಬಾಲ್ಯವಿವಾಹ ನಿರ್ಮೂಲನೆಯ ಪ್ರತಿಜ್ಞೆ ಸ್ವೀಕರಿಸುವಂತೆ ಕರೆ ನೀಡಿದೆ.
ಪ್ರತಿಯೊಂದು ಮಗುವಿಗೂ ಸುರಕ್ಷಿತ, ಆರೋಗ್ಯಕರ, ಶಿಕ್ಷಣಪೂರ್ಣ ಮತ್ತು ಸಬಲ ಬಾಲ್ಯವನ್ನು ಖಾತರಿಪಡಿಸುವುದು ಈ ಅಭಿಯಾನದ ಅಂತಿಮ ಗುರಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.