
ನವದೆಹಲಿ, 26 ನವೆಂಬರ್ (ಹಿ.ಸ.):
ಸಂವಿಧಾನ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಪಕ್ಷ ಗುರುವಾರ ದೇಶಾದ್ಯಂತ ‘ಸಂವಿಧಾನ ರಕ್ಷಣಾ ಪಾದಯಾತ್ರೆ ನಡೆಸಿತು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲಖನೌನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.
ದೆಹಲಿಯಲ್ಲಿ ನಡೆದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೀಪೇಂದ್ರ ಯಾದವ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಾಯಕರು ತಮ್ಮ ಕೈಗಳಲ್ಲಿ ಸಂವಿಧಾನದ ಪೀಠಿಕೆಯ ಪ್ರತಿಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು.
ಸಂವಿಧಾನ ಕೇವಲ ಕಾನೂನು ದಾಖಲೆಯಲ್ಲ, ಅದು ಭಾರತದ ಧ್ವನಿಯಾಗಿದೆ. ಈ ಧ್ವನಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಹೊಂದಿದೆ ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ ದೇಶಾದ್ಯಂತ ಸಂವಿಧಾನ ರಕ್ಷಣಾ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಪಕ್ಷ ತಿಳಿಸಿದೆ.
ಕೇಂದ್ರ ಸರ್ಕಾರದ ವಿರುದ್ಧ ವೇಣುಗೋಪಾಲ್ ಆರೋಪ
ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೇಂದ್ರ ಸರ್ಕಾರ ಸಂವಿಧಾನದ ತತ್ವಗಳಿಗೆ ಸಂಪೂರ್ಣ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಸರ್ಕಾರ ಕಳೆದುಕೊಂಡಿದೆ ಎಂದು ಟೀಕಿಸಿದರು.
ಆಗಸ್ಟ್ 13ರಂದು ಮುಂಗಾರು ಅಧಿವೇಶನ ನಡೆದಿತ್ತು. ಇದೀಗ ನವೆಂಬರ್ 26 ಆಗಿದ್ದು, 106 ದಿನಗಳು ಕಳೆದಿವೆ. ಆದರೂ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಈ ಮೂಲಕ ಕೇಂದ್ರ ಸರ್ಕಾರ ಸಂಸತ್ತಿನ ಕಾರ್ಯವೈಖರಿಯನ್ನೇ ಅಣಕಿಸುತ್ತಿದೆ ಎಂದು ದೂರಿದರು.
ಸಂವಿಧಾನ ದಿನಾಚರಣೆ ಅಂಗವಾಗಿ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನ ರಕ್ಷಣಾ ಪಾದಯಾತ್ರೆ ನಡೆಸುತ್ತಿದ್ದು, ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ಲಕ್ಷಣವೇ ಪಾರದರ್ಶಕತೆಯ ಕೊರತೆ ಎಂದು ಆರೋಪಿಸಿದ ವೇಣುಗೋಪಾಲ್, ಸಂಸತ್ತಿನ ಘನತೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಟೀಕಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವ ಸಂಸ್ಥೆಗಳು ಮತ್ತು ಅದರ ಮೂಲ ಅಡಿಪಾಯವನ್ನು ವ್ಯವಸ್ಥಿತವಾಗಿ ನಾಶಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾಂವಿಧಾನಿಕ ಸಂಸ್ಥೆಗಳ ರಕ್ಷಣೆಯ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾಂಗ್ರೆಸ್ ಈ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಪಕ್ಷ ತಿಳಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.