
ಹುಬ್ಬಳ್ಳಿ, 26 ನವೆಂಬರ್ (ಹಿ.ಸ.):
ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವತಿಯಿಂದ ನಗರದ ಕೇಶ್ವಾಪುರ ರಸ್ತೆಯಲ್ಲಿರುವ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹುಬ್ಬಳ್ಳಿ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರೇಮ ಚಂದ್ರ ಅವರು, ವಿಶ್ವದಲ್ಲಿಯೇ ಭಾರತದ ಸಂವಿಧಾನ ವಿಶಿಷ್ಟ ಸ್ಥಾನ ಹೊಂದಿದೆ. ಸಂವಿಧಾನದಲ್ಲಿರುವ ಮೌಲ್ಯಗಳು, ಪ್ರಜಾಪ್ರಭುತ್ವದ ತತ್ವಗಳು ಹಾಗೂ ಮೂಲಭೂತ ಕರ್ತವ್ಯಗಳ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಹೇಳಿದರು.
ನಂತರ ಪ್ರೇಮ ಚಂದ್ರ ಅವರ ನೇತೃತ್ವದಲ್ಲಿ ರೈಲ್ವೆ ವಿಭಾಗದ ಎಲ್ಲ ಸಿಬ್ಬಂದಿ ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಪಠಿಸಿದರು. ಈ ಮೂಲಕ ಸಂವಿಧಾನದಲ್ಲಿ ಅಡಕವಾಗಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆದರ್ಶಗಳನ್ನು ಎತ್ತಿಹಿಡಿಯುವ ಬದ್ಧತೆಯನ್ನು ಪುನರುಚ್ಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.