
ಕಲಬುರಗಿ, 26 ನವೆಂಬರ್ (ಹಿ.ಸ.):
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ನೂತನ ಪೊಲೀಸ್ ಆಯುಕ್ತರ ನೇಮಕಾತಿ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.
ನವೆಂಬರ್ 18ರಂದು ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಬಿಡುಗಡೆ ಮಾಡಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಕ ಮಾಡಿದೆ.
ಆದರೆ ವರ್ಗಾವಣೆ ಆದೇಶ ಹೊರಬಿದ್ದು ಎಂಟು ದಿನ ಕಳೆದರೂ ನೂತನ ಆಯುಕ್ತರು ಇನ್ನೂ ಹುದ್ದೆ ಸ್ವೀಕರಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
2011ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಕುಲದೀಪ್ ಕುಮಾರ್ ಜೈನ್ ಅವರು ಈ ಹಿಂದೆ ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ, ಬೆಂಗಳೂರು ನಗರದ ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಇಂತಹ ಅನುಭವಿ ಅಧಿಕಾರಿಯ ನೇಮಕಾತಿ ನಡೆದಿದ್ದರೂ ಕಲಬುರಗಿಗೆ ಆಗಮಿಸಿ ಅಧಿಕಾರ ಸ್ವೀಕರಿಸದಿರುವುದು ಇಲಾಖೆಯ ಕಾರ್ಯವೈಖರಿ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಇನ್ನೊಂದೆಡೆ, ಕಲಬುರಗಿಯ ಹಾಲಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರನ್ನು ರೈಲ್ವೆ ವಿಭಾಗದ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಆದರೆ ವರ್ಗಾವಣೆ ಆದೇಶ ಹೊರಬಿದ್ದಿದ್ದರೂ ಅವರಿಗೆ ಇಲಾಖೆಯಿಂದ ಈವರೆಗೆ ಮೂವ್ಮೆಂಟ್ ಲೆಟರ್ ಬಂದಿಲ್ಲ ಎನ್ನಲಾಗಿದೆ. ಇದರಿಂದ ಹಾಲಿ ಮತ್ತು ನೂತನ ಆಯುಕ್ತರ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಗೊಂದಲದಲ್ಲಿದೆ.
ಕಲಬುರಗಿ ನಗರ ಪೊಲೀಸ್ ಆಯುಕ್ತರ ಹುದ್ದೆ ಸ್ವೀಕರಿಸಲು ಹಲವು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಒತ್ತಡಕ್ಕೆ ಒಳಗಾಗಬೇಕಾಗಬಹುದು ಎಂಬ ಆತಂಕವೇ ಅಧಿಕಾರಿಗಳ ಹಿಂದೇಟಿಗೆ ಕಾರಣ ಎನ್ನಲಾಗುತ್ತಿದೆ.
ಆದರೆ ಈ ಆರೋಪಗಳಿಗೆ ಅಧಿಕೃತವಾಗಿ ಯಾವುದೇ ಸ್ಪಷ್ಟನೆ ಹೊರಬಿದ್ದಿಲ್ಲ. ಪೊಲೀಸ್ ಇಲಾಖೆಯಲ್ಲಿನ ಈ ಬೆಳವಣಿಗೆಗಳಿಂದ ಸಾರ್ವಜನಿಕರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R