ನ್ಯಾಯಮೂರ್ತಿಗಳ ನೇಮಕ, ವರ್ಗಾವಣೆ ವಿಚಾರದಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಮಾಜಿ ಮುಖ್ಯ ನ್ಯಾಯಮೂರ್ತಿ ಗವಾಯಿ ಮನವಿ
ನವದೆಹಲಿ, 27 ನವೆಂಬರ್ (ಹಿ.ಸ.): ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆ ವಿಚಾರದಲ್ಲಿ ಕೊಲಿಜಿಯಂ ಇತ್ತೀಚೆಗೆ ಮಾಡಿರುವ ಶಿಫಾರಸುಗಳು ಒಂದು ನಿರ್ದಿಷ್ಟ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದರಿಂದ ಅರ್ಹತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಗೆ ಧಕ್ಕೆಯಾಗುತ್ತಿದೆ ಎಂದ
ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ರಾಷ್ಟ್ರಪತಿಗಳಿಗೆ ಬರೆದ ಪತ್ರ


ನವದೆಹಲಿ, 27 ನವೆಂಬರ್ (ಹಿ.ಸ.):

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆ ವಿಚಾರದಲ್ಲಿ ಕೊಲಿಜಿಯಂ ಇತ್ತೀಚೆಗೆ ಮಾಡಿರುವ ಶಿಫಾರಸುಗಳು ಒಂದು ನಿರ್ದಿಷ್ಟ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದರಿಂದ ಅರ್ಹತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಮೂರು ಪುಟಗಳ ಸುದೀರ್ಘ ಪತ್ರದಲ್ಲಿ ನ್ಯಾಯಾಂಗ ನೇಮಕಾತಿ ಪ್ರಕ್ರಿಯೆಯಲ್ಲಿನ ಅಸಮತೋಲನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಗವಾಯಿ, ದೇಶದ ಜನಸಂಖ್ಯೆಯಲ್ಲಿ ಶೇ.5ಕ್ಕಿಂತ ಕಡಿಮೆ ಇರುವ ಸಮುದಾಯವೊಂದು ಸುಪ್ರೀಂ ಕೋರ್ಟ್‌ನಲ್ಲಿ ಶೇ.40ಕ್ಕೂ ಹೆಚ್ಚು ಪ್ರಾತಿನಿಧ್ಯ ಹೊಂದಿದೆ ಎಂದು ಉಲ್ಲೇಖಿಸಿದ್ದಾರೆ.

ಹಿಂದೆ ಶಿಕ್ಷಾರ್ಹ ಕಾರಣಗಳಿಗಾಗಿ ವರ್ಗಾವಣೆಗೊಂಡಿದ್ದ ಕೆಲವು ನ್ಯಾಯಮೂರ್ತಿಗಳಿಗೆ ಇದೀಗ ಪ್ರಮುಖ ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಮೂಲಕ ಬಹುಮಾನ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅದೇ ರೀತಿ, ಅರ್ಹತೆ ಮತ್ತು ಪರಿಶ್ರಮದಿಂದ ಕಾರ್ಯನಿರ್ವಹಿಸುತ್ತಿರುವ ಮುಖ್ಯ ನ್ಯಾಯಮೂರ್ತಿಯೊಬ್ಬರನ್ನು ಮತ್ತೊಂದು ಸಣ್ಣ ಉಚ್ಚ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ, ಆ ಸ್ಥಾನದಲ್ಲಿ ಬೇರೆ ನ್ಯಾಯಮೂರ್ತಿಯನ್ನು ನೇಮಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಪತ್ರದಲ್ಲಿ ಆಕ್ಷೇಪಿಸಿದ್ದಾರೆ.

ಇತ್ತೀಚಿನ ನೇಮಕಾತಿ ಶಿಫಾರಸುಗಳಲ್ಲಿ ಅಂಚಿನಲ್ಲಿರುವ ಸಮುದಾಯಗಳು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಇತರ ಸಾಮಾನ್ಯ ವರ್ಗಗಳಿಗೂ ಸೂಕ್ತ ಪ್ರಾತಿನಿಧ್ಯ ನೀಡಲಾಗಿಲ್ಲ ಎಂದು ಗವಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಲಿಜಿಯಂ ಶಿಫಾರಸುಗಳಿಗೆ ಪ್ರಾಮುಖ್ಯತೆ ಇದೆ ಎಂಬ ಕಾರಣಕ್ಕೆ ಆ ವ್ಯವಸ್ಥೆ ಹೊಣೆಗಾರಿಕೆಯಿಂದ ಮುಕ್ತವಾಗುವುದಿಲ್ಲ. ಹಾಗೆಯೇ, ಸಂವಿಧಾನದ ಅಡಿಯಲ್ಲಿ ರಾಷ್ಟ್ರಪತಿಗಳಿಗೆ ಇರುವ ಕರ್ತವ್ಯಗಳಿಂದಲೂ ವಿನಾಯಿತಿ ದೊರೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಪತ್ರದಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ಗವಾಯಿ, ನನ್ನ ಭಿನ್ನಾಭಿಪ್ರಾಯ ಮತ್ತು ನಿರಾಶೆಯನ್ನು ವ್ಯಕ್ತಪಡಿಸುವ ಅನಿವಾರ್ಯತೆ ಎದುರಾಗಿದೆ ಎಂದು ಬರೆದಿದ್ದಾರೆ.

ಈ ಪತ್ರದ ಪ್ರತಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರಿಗೂ ಕಳುಹಿಸಲಾಗಿದೆ.

ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿ ಅರ್ಹತೆ, ಸಾಮಾಜಿಕ ವೈವಿಧ್ಯತೆ ಹಾಗೂ ಎಲ್ಲ ಸಮುದಾಯಗಳ ಪ್ರಾತಿನಿಧ್ಯವನ್ನು ಪರಿಗಣಿಸಬೇಕು ಎಂಬ ವಿಚಾರವನ್ನು ಗವಾಯಿ ತಮ್ಮ ಪತ್ರದ ಮೂಲಕ ಪ್ರಸ್ತಾಪಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande