ಲೋಕಸಭಾ ಸ್ಥಾನಗಳ ಸಂಖ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ದಕ್ಷಿಣ ಭಾರತದ ರಾಜ್ಯಗಳ ಆತಂಕದ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಶೇ.50ರಷ್ಟು ಹೆಚ್ಚಿಸುವ ಹಾಗೂ ರಾಜ್ಯವಾರು ಸ್ಥಾನ ಹಂಚಿಕೆಯನ್ನು 2051ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರಿಸುವ ಪ್ರಸ್ತಾವನೆ
ಲೋಕಸಭಾ ಸ್ಥಾನಗಳ ಸಂಖ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ


ನವದೆಹಲಿ, 27 ನವೆಂಬರ್ (ಹಿ.ಸ.):

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ಆತಂಕಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳಿಗೆ ಮುಂದಾಗಿದೆ.

ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಏಕರೂಪವಾಗಿ ಶೇ.50ರಷ್ಟು ಹೆಚ್ಚಿಸುವುದು ಹಾಗೂ ರಾಜ್ಯವಾರು ಸ್ಥಾನಗಳ ಹಂಚಿಕೆಯ ಅನುಪಾತವನ್ನು 2051ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಹಿಳಾ ಮೀಸಲಾತಿ ಜಾರಿ ಹಾಗೂ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.

ಎಲ್ಲಾ ರಾಜ್ಯಗಳಿಗೂ ಶೇ.50ರಷ್ಟು ಸ್ಥಾನ ಹೆಚ್ಚಳ:ಪ್ರಸ್ತುತ ಲೋಕಸಭೆಯಲ್ಲಿ 543 ಸ್ಥಾನಗಳಿದ್ದು, ಇದನ್ನು ಸುಮಾರು 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯಗಳ ಪಾಲಿಗೆ ಗರಿಷ್ಠ 815 ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 35 ಸ್ಥಾನಗಳನ್ನು ನಿಗದಿಪಡಿಸುವ ಉದ್ದೇಶವಿದೆ.

ಯಾವುದೇ ರಾಜ್ಯದ ರಾಜಕೀಯ ಪ್ರಾತಿನಿಧ್ಯಕ್ಕೆ ಧಕ್ಕೆಯಾಗದಂತೆ ಏಕರೂಪವಾಗಿ ಶೇ.50ರಷ್ಟು ಸ್ಥಾನಗಳನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ.

2051ರವರೆಗೆ ಸ್ಥಾನಗಳ ಹಂಚಿಕೆ ಯಥಾಸ್ಥಿತಿ:ರಾಜ್ಯವಾರು ಲೋಕಸಭಾ ಸ್ಥಾನಗಳ ಹಂಚಿಕೆಯ ಅನುಪಾತವನ್ನು ಮುಂದಿನ 25 ವರ್ಷಗಳವರೆಗೆ ಅಂದರೆ 2051ರವರೆಗೆ ಬದಲಾಯಿಸದಿರಲು ಪ್ರಸ್ತಾಪಿಸಲಾಗಿದೆ.

ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರವು 2026ರವರೆಗೆ ಕ್ಷೇತ್ರಗಳ ಸ್ಥಾನ ಹಂಚಿಕೆಯನ್ನು ಸ್ಥಗಿತಗೊಳಿಸಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸುವ ಪ್ರಸ್ತಾವನೆ ಮುಂದಿಟ್ಟಿದೆ.

ಹೊಸ ಜನಗಣತಿಯಿಂದ ಸ್ಥಾನ ಹಂಚಿಕೆ ಪ್ರತ್ಯೇಕ:ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್ವಿಂಗಡಣೆಯಿಂದ ಉತ್ತರ ಭಾರತದ ರಾಜ್ಯಗಳ ಲೋಕಸಭಾ ಸ್ಥಾನಗಳು ಹೆಚ್ಚಾಗಿ, ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ಕಡಿಮೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಅಂತಾರಾಜ್ಯ ಸ್ಥಾನ ಹಂಚಿಕೆಯನ್ನು ಜನಗಣತಿಯ ಆಧಾರದಿಂದ ಪ್ರತ್ಯೇಕಿಸುವ ಪ್ರಸ್ತಾವನೆ ಮಾಡಲಾಗಿದೆ.

ಆದರೆ ರಾಜ್ಯದೊಳಗಿನ ಲೋಕಸಭಾ ಕ್ಷೇತ್ರಗಳ ಗಡಿ ಮರುನಿರ್ಣಯಕ್ಕೆ 2011ರ ಜನಗಣತಿಯನ್ನು ಬಳಸುವ ಪ್ರಸ್ತಾಪವಿದೆ. ಇದರ ಪ್ರಕಾರ ಕರ್ನಾಟಕದ ಲೋಕಸಭಾ ಸ್ಥಾನಗಳು ಪ್ರಸ್ತುತ 28ರಿಂದ 42ಕ್ಕೆ ಹೆಚ್ಚಾಗಲಿದ್ದು, ಹೊಸ ಕ್ಷೇತ್ರಗಳ ಭೌಗೋಳಿಕ ವ್ಯಾಪ್ತಿಯನ್ನು ಮರುನಿರ್ಧರಿಸುವ ಸಾಧ್ಯತೆಯಿದೆ.

ಮಹಿಳಾ ಮೀಸಲಾತಿ ಮಸೂದೆ ಮಂಡನೆ:ನವೆಂಬರ್ 30ರಂದು ಲೋಕಸಭೆ ಹಾಗೂ ಡಿಸೆಂಬರ್ 2ರಂದು ರಾಜ್ಯಸಭೆಯಲ್ಲಿ ವಿಶೇಷ ಕಲಾಪ ನಡೆಯಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮತ್ತು ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸುವ ನಿರೀಕ್ಷೆಯಿದೆ.

ಇನ್ನೊಂದೆಡೆ, ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ತಮ್ಮ ಮುಂದಿನ ಕಾರ್ಯತಂತ್ರ ರೂಪಿಸಲು ಸಜ್ಜಾಗಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 28ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದ್ದು, ಮಸೂದೆ ಹಾಗೂ ಕ್ಷೇತ್ರ ಪುನರ್ವಿಂಗಡಣೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.

ಒಟ್ಟಾರೆ, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳು ವ್ಯಕ್ತಪಡಿಸಿರುವ ಆತಂಕಕ್ಕೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande