ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನಾಳೆಯೇ ಕಾರ್ತಿಕ ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ತಮಿಳುನಾಡಿನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನವೆಂಬರ್ 28ರಂದು ಕಾರ್ತಿಕ ದೀಪ ಬೆಳಗಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯದ ಹಿಂದಿನ ಆದೇಶ ಪಾಲಿಸದ ತಮಿಳುನಾಡು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಪೀಠ, ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
Supreme-Court-Orders-Karthigai-Deepam-at-Thiruparankundram-Hill-Tomorrow


ನವದೆಹಲಿ, 27 ನವೆಂಬರ್ (ಹಿ.ಸ.):

ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ನವೆಂಬರ್ 28ರಂದು (ನಾಳೆ) ಬೆಟ್ಟದ ಮೇಲಿರುವ ದೀಪಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಲೇಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ. ಈ ಹಿಂದೆ ನವೆಂಬರ್ 20ರಂದು ಸುಪ್ರೀಂ ಕೋರ್ಟ್ ದೀಪಸ್ತಂಭದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿದ್ದರೂ,

ನವೆಂಬರ್ 24ರಂದು ನಡೆದ ಕಾರ್ತಿಕ ದೀಪೋತ್ಸವದ ಸಂದರ್ಭದಲ್ಲಿ ಸಾಂಪ್ರದಾಯಿಕ ಸ್ಥಳವಾದ ಉಚ್ಚಿಪಿಳ್ಳೈಯಾರ್ ಮಂಟಪದಲ್ಲಿ ಮಾತ್ರ ದೀಪ ಬೆಳಗಿಸಲಾಗಿತ್ತು. ಇದರಿಂದ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ರಾಜ್ಯದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಹಲವು ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಡಿಸೆಂಬರ್ 15ರಂದು ವಿಚಾರಣೆಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿದೆ.

ಇದೇ ವೇಳೆ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿ, ನಿವೃತ್ತ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ವೈದಿನಾಥನ್ ಮತ್ತು ಪಾರ್ಥಿಬನ್ ಅವರನ್ನು ಆಡಳಿತದ ಮೇಲ್ವಿಚಾರಕರನ್ನಾಗಿ ನೇಮಿಸಿದೆ.

ದೇವಸ್ಥಾನ ಹಾಗೂ ತಿರುಪ್ಪರಂಕುಂದ್ರಂ ಬೆಟ್ಟದ ಭದ್ರತೆಯನ್ನು ಸಿಆರ್ಪಿಎಫ್ಗೆ ವಹಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಉಚ್ಚಿಪಿಳ್ಳೈಯಾರ್ ಮಂಟಪದಲ್ಲಿ ಬೆಳಗಿಸಿದ ದೀಪದಿಂದಲೇ ದೀಪಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಬೇಕು. ಭಕ್ತರು ಕೂಡ ದೀಪ ಬೆಳಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದೆ.

ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಅಧಿಕಾರಿಗಳ ಇಂತಹ ವರ್ತನೆಯನ್ನು ಕಠಿಣವಾಗಿ ನಿಭಾಯಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande