ಬಿಸಿಯೂಟ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರದೊಂದಿಗೆ ಚರ್ಚೆ: ಶಾಸಕ ಕೊತ್ತೂರು ಮಂಜುನಾಥ್ ಭರವಸೆ
ಕ್ಲಸ್ಟರ್ ಕಿಚನ್ ರದ್ದು ಮಾಡಲು ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ
ಕ್ಲಸ್ಟರ್ ಕಿಚನ್ ಪದ್ದತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಅಕ್ಷರ ದಾಸೋಹ ನೌಕರರನ್ನು ಭೇಟಿಯಾಗಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಆಲಿಸಿದರು.


ಕೋಲಾರ, 28 ನವೆಂಬರ್ (ಹಿ.ಸ.)

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸುವುದು, ಕ್ಲಸ್ಟರ್ ಅಡುಗೆಮನೆ ವ್ಯವಸ್ಥೆ ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ನ್ಯಾಯ ದೊರಕಿಸಲು ಪ್ರಯತ್ನಿಸುವುದಾಗಿ ಶಾಸಕ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು.

ಕೋಲಾರ ತಾಲ್ಲೂಕಿನ ನರಸಾಪುರ ಹೋಬಳಿಯ ರಾಮಸಂದ್ರ ಗಡಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಬಿಸಿಯೂಟ ನೌಕರರನ್ನು ಭೇಟಿ ಮಾಡಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಕೆಲಸ ಮಾಡುತ್ತಿರುವ ಮಹಿಳಾ ನೌಕರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅವರ ಬೇಡಿಕೆಗಳಿಗೆ ನ್ಯಾಯ ದೊರಕಿಸಲು ಪ್ರಯತ್ನಿಸಲಾಗುವುದು. ಕ್ಲಸ್ಟರ್ ಅಡುಗೆಮನೆ ವ್ಯವಸ್ಥೆಯಿಂದ ದೂರದ ಗ್ರಾಮಗಳ ಶಾಲೆಗಳಿಗೆ ಆಹಾರ ಸಾಗಿಸುವಾಗ ವಿಳಂಬವಾಗುವ ಸಾಧ್ಯತೆ ಇದೆ. ಅಲ್ಲದೆ, ಆಹಾರದ ಗುಣಮಟ್ಟ ಹಾಗೂ ಸಾಗಣೆ ಸಂದರ್ಭದಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ಪರಿಗಣಿಸಿದರೆ ಆಯಾ ಶಾಲೆಗಳಲ್ಲಿಯೇ ಅಡುಗೆ ವ್ಯವಸ್ಥೆ ಮುಂದುವರಿಸುವುದು ಸೂಕ್ತವಾಗಿದೆ. ನಿಮ್ಮ ಬೇಡಿಕೆಗಳಿಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಬಿಸಿಯೂಟ ನೌಕರರ 14 ಬೇಡಿಕೆಗಳಲ್ಲಿ ಕ್ಲಸ್ಟರ್ ಅಡುಗೆಮನೆ ವ್ಯವಸ್ಥೆ ರದ್ದುಗೊಳಿಸುವುದು ಪ್ರಮುಖ ಬೇಡಿಕೆಯಾಗಿದೆ. ಸರ್ಕಾರದ ಮಟ್ಟದಲ್ಲಿ ಈಡೇರಿಸಲು ಸಾಧ್ಯವಿರುವ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗುವುದು. ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೀರಿ. ಆದ್ದರಿಂದ ಧರಣಿ ಕೈಬಿಟ್ಟು ಮನೆಗಳಿಗೆ ತೆರಳುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ. ಬಾಗೇವಾಡಿ ಅವರು ನೌಕರರಿಂದ ಮನವಿ ಸ್ವೀಕರಿಸಿ, ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಸ್ಥಾಪಕ ಅಧ್ಯಕ್ಷೆ ಕಲ್ಪಮಂಜಲಿ ಸಿ. ಶಿವಣ್ಣ, ರಾಜ್ಯ ಅಧ್ಯಕ್ಷ ಜಿ.ಕೆ.ಹಳ್ಳಿ ಸಿ. ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ರಾಜ್ಯ ಯುವ ಘಟಕದ ಅಧ್ಯಕ್ಷ ರಾಮು ಶಿವಣ್ಣ, ಮುಖಂಡ ಕೊತ್ತಮೀರಿ ಮಂಜುನಾಥ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande