ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆಗೆ ಬೆಂಗಳೂರು ಸಜ್ಜು
ಬೆಂಗಳೂರಿನಲ್ಲಿ ನಡೆಯಲಿರುವ ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ವ್ಯವಸ್ಥೆ, ರೈತರಿಗೆ ಉಚಿತ ಮಳಿಗೆ, ಬಿಗಿ ಪೊಲೀಸ್ ಬಂದೋಬಸ್ತ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
Bengaluru Plastic-Free Groundnut Fair Preparations


ಬೆಂಗಳೂರು, 28 ನವೆಂಬರ್ (ಹಿ.ಸ.):

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯಲಿರುವ ಐತಿಹಾಸಿಕ ಕಡಲೆಕಾಯಿ ಪರಿಷೆಯನ್ನು ಈ ಬಾರಿ ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ.

ಪರಿಸರ ಸಂರಕ್ಷಣೆಯ ಉದ್ದೇಶದಿಂದ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಿ, ಪರಿಸರ ಸ್ನೇಹಿ ಪರಿಕರಗಳ ಬಳಕೆಗೆ ಆದ್ಯತೆ ನೀಡಲು ಯೋಜಿಸಲಾಗಿದೆ.

ಮಲ್ಲೇಶ್ವರಂನ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನ.28ರಿಂದ ಮೂರು ದಿನಗಳ ಕಾಲ ಈ ಪರಿಷೆ ನಡೆಯಲಿದೆ. ಇದು 10ನೇ ವರ್ಷದ ಕಡಲೆಕಾಯಿ ಪರಿಷೆಯಾಗಿದ್ದು, ರೈತರು ಮತ್ತು ವ್ಯಾಪಾರಿಗಳಿಗೆ ಸುಮಾರು 600 ಉಚಿತ ಮಳಿಗೆಗಳನ್ನು ಒದಗಿಸಲಾಗಿದೆ. ರೈತರು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪ್ಲಾಸ್ಟಿಕ್ ಚೀಲಗಳ ಬದಲಿಗೆ ವ್ಯಾಪಾರಿಗಳಿಗೆ ಪೇಪರ್ ಬ್ಯಾಗ್ಗಳನ್ನು ವಿತರಿಸಲು ವಿವಿಧ ಸ್ವಯಂಸೇವಾ ಸಂಸ್ಥೆಗಳು ಸಹಕಾರ ನೀಡುತ್ತಿವೆ. ಈ ಮೂಲಕ ಪರಿಸರ ಸ್ನೇಹಿ ಪರಿಷೆ ನಡೆಸಲು ಸಂಘಟಕರು ಮುಂದಾಗಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಕೊರತೆಯಿಂದ ಸ್ಥಳೀಯ ರೈತರ ಭಾಗವಹಿಸುವಿಕೆ ತುಸು ಕಡಿಮೆಯಾಗಿದೆ. ಆದರೆ ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕಡಲೆಕಾಯಿ ಮೂಟೆಗಳೊಂದಿಗೆ ಆಗಮಿಸಿದ್ದಾರೆ.

ಪರಿಷೆಗೆ ಪ್ರತಿನಿತ್ಯ ಲಕ್ಷಾಂತರ ಜನರು ಭೇಟಿ ನೀಡುವ ನಿರೀಕ್ಷೆಯಿದೆ. ಜನರ ಸುರಕ್ಷತೆಗಾಗಿ 100ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳು, 500 ಸ್ವಯಂಸೇವಕರನ್ನು ನಿಯೋಜಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ. ಜನದಟ್ಟಣೆ ನಿಯಂತ್ರಿಸಲು ದೇವಸ್ಥಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಕಾಡುಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ. ಶಿವರಾಂ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ದೇವಸ್ಥಾನಕ್ಕೆ ಸೇರಿದ ಸುಮಾರು 48 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಒತ್ತುವರಿ ಪ್ರಯತ್ನದಿಂದ ರಕ್ಷಿಸಲಾಗಿದ್ದು, ಆಸ್ತಿಯಿಂದ ಪ್ರತಿ ತಿಂಗಳು 4.5 ಲಕ್ಷ ರೂಪಾಯಿ ಬಾಡಿಗೆ ಆದಾಯ ಬರುತ್ತಿದೆ.

ಕಡಲೆಕಾಯಿ ಪರಿಷೆ ಮುಗಿದ ಬಳಿಕ ದೇವಸ್ಥಾನದ ಆವರಣದಲ್ಲಿ ನೂತನ ಅನ್ನದಾಸೋಹ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande