ರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ ಆಯೋಜನೆಗೆ ಸಿದ್ಧ: ಕೃಷ್ಣಾರೆಡ್ಡಿ
ಪದಕ ವಿಜೇತ ಕ್ರೀಡಾಪಟುಗಳಿಗೆ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಕೃಷ್ಣಾರೆಡ್ಡಿ ಸನ್ಮಾನ
ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತರಾದ ಕೋಲಾರ ಜಿಲ್ಲೆಯ ಕ್ರೀಡಾಪಟುಗಳನ್ನು ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ ಸನ್ಮಾನಿಸಿದರು.


ಕೋಲಾರ,28 ನವೆಂಬರ್ (ಹಿ.ಸ.)

ಜಿಲ್ಲೆಯಲ್ಲಿ ಈ ಹಿಂದೆ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅವಕಾಶ ದೊರೆತರೆ ರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ ಆಯೋಜಿಸಲೂ ಸಿದ್ಧರಿದ್ದೇವೆ ಎಂದು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ವಿ. ಕೃಷ್ಣಾರೆಡ್ಡಿ ಭರವಸೆ ನೀಡಿದರು.

ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕೋಲಾರ ಜಿಲ್ಲೆಯ ಕ್ರೀಡಾಪಟುಗಳನ್ನು ಶನಿವಾರ ನಗರದ ಬೈರೇಗೌಡ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸನ್ಮಾನಿಸಿ ಅವರು ಮಾತನಾಡಿದರು.

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳು 13 ಚಿನ್ನ, 10 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಕ್ರೀಡಾಪಟುಗಳು ಸಾಕಷ್ಟು ಶ್ರಮ ಮತ್ತು ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಅವರನ್ನು ಗೌರವಿಸುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ. ಅವರ ಸಾಧನೆ ಹೀಗೆಯೇ ಮುಂದುವರಿಯಬೇಕು ಎಂದು ಆಶಿಸಿದರು.

ರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ ಆಯೋಜಿಸುವ ಅವಕಾಶ ದೊರೆತರೆ ಕ್ರೀಡಾಪಟುಗಳ ವಸತಿ, ಊಟ, ಕ್ರೀಡಾಂಗಣ ಸೇರಿದಂತೆ ಅಗತ್ಯ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುವುದು. ಸಂಸ್ಥೆಯ ಅಧ್ಯಕ್ಷನಾಗಿ ಕ್ರೀಡಾಪಟುಗಳಿಗೆ ಅಗತ್ಯ ನೆರವು ಮತ್ತು ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ವಹಿಸುತ್ತೇನೆ. ಈಗಾಗಲೇ ರಾಜ್ಯಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಿದ ಅನುಭವವಿದೆ ಎಂದರು.

ಹಿರಿಯ ಕ್ರೀಡಾಪಟುಗಳು ಪ್ರತಿದಿನ ಅಭ್ಯಾಸ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಇದಕ್ಕೆ ವ್ಯವಸ್ಥೆ ಮಾಡಬಹುದು. ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಜಿಲ್ಲೆಯ ಕ್ರೀಡಾಪಟುಗಳಿಗೆ ಸಂಸ್ಥೆಯಿಂದ ಆರ್ಥಿಕ ನೆರವು ನೀಡಲಾಗುವುದು. ಪ್ರಯಾಣ ಮತ್ತು ಸ್ಪರ್ಧೆಗೆ ಸಂಬಂಧಿಸಿದ ವೆಚ್ಚದ ಜವಾಬ್ದಾರಿಯನ್ನು ಸಂಸ್ಥೆ ವಹಿಸಿಕೊಳ್ಳಲಿದೆ. ಕ್ರೀಡಾಪಟುಗಳು ಪದಕ ಗೆದ್ದು ಬರಬೇಕು ಎಂದು ಹಾರೈಸಿದರು.

ಮಕ್ಕಳಿಗೆ ಕೇವಲ ವಿದ್ಯಾಭ್ಯಾಸದಿಂದ ಮಾತ್ರ ಉತ್ತಮ ಸಂಸ್ಕಾರ ದೊರೆಯುವುದಿಲ್ಲ. ಕ್ರೀಡೆ, ಸಂಸ್ಕೃತಿ ಮತ್ತು ಶಿಸ್ತನ್ನೂ ಕಲಿಸಬೇಕು. ನಗರಸಭೆಯಿಂದ ಸಂಘಕ್ಕೆ ನಿವೇಶನ ದೊರೆತರೆ ಸ್ವಂತ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಹಾಗೂ ಅಂತರರಾಷ್ಟ್ರೀಯ ಅಥ್ಲೀಟ್ ಮೂರಾಂಡಹಳ್ಳಿ ವಿ. ಮಾರಪ್ಪ ಮಾತನಾಡಿ, ಬೆಂಗಳೂರಿನಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್‌ಗೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದ ಸಭೆ ನಡೆಯುತ್ತಿದೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ. ಕ್ರೀಡಾಕೂಟ ಎಲ್ಲಿ ನಡೆದರೂ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಲು ಸಿದ್ಧರಾಗಿರಬೇಕು ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande