ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡುಗೆ: ಶಿವಾನಂದ ಆಚಾರ್ಯ
ಕೋಲಾರ, 28 ನವೆಂಬರ್ (ಹಿ.ಸ.) ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಮಹಿಳೆಯರನ್ನು ಸಂಘಟಿಸಿ ಅವರ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನಡೆದ ವಿಚಾರಗೋಷ್ಠಿಯನ್ನು ಸಂಸ್ಥೆಯ ಕೋಲಾರ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ ಉದ್ಘಾಟಿಸಿದರು.


ಕೋಲಾರ, 28 ನವೆಂಬರ್ (ಹಿ.ಸ.)

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಮಹಿಳೆಯರನ್ನು ಸಂಘಟಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೋಲಾರ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ ಹೇಳಿದರು.

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕೋಲಾರ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿದ್ದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಕ್ಷೇತ್ರದಿಂದ ಕೋಲಾರ ಜಿಲ್ಲೆಯಲ್ಲಿ ಒಟ್ಟು 369 ದೇವಾಲಯಗಳ ಅಭಿವೃದ್ಧಿಗೆ 5.49 ಕೋಟಿ ರೂ. ಅನುದಾನ ನೀಡಲಾಗಿದೆ. ಅಲ್ಲದೆ, 608 ವಿಕಲಚೇತನರಿಗೆ 18 ಲಕ್ಷ ರೂ. ಮೌಲ್ಯದ ಅಗತ್ಯ ಸಲಕರಣೆಗಳನ್ನು ವಿತರಿಸುವ ಮೂಲಕ ನೆರವು ನೀಡಲಾಗಿದೆ. ಜಿಲ್ಲೆಯ 42 ನಿರ್ಗತಿಕರಿಗೆ ವಾತ್ಸಲ್ಯ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. 445 ನಿರ್ಗತಿಕರಿಗೆ ಪ್ರತಿ ತಿಂಗಳು ಒಟ್ಟು 4,46,000 ರೂ. ಮಾಶಾಸನ ವಿತರಿಸುವ ಮೂಲಕ ಅವರ ಜೀವನಕ್ಕೆ ಆಸರೆಯಾಗಲಾಗಿದೆ ಎಂದು ತಿಳಿಸಿದರು.

ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಮಹಿಳೆಯರಿಗೆ ದೊರೆಯುವ ಬ್ಯಾಂಕ್ ಸೌಲಭ್ಯಗಳು ಹಾಗೂ ಸಾಲ ಸೌಲಭ್ಯಗಳ ಕುರಿತು ವಿವರಿಸಿದ ಅವರು, ಮಹಿಳೆಯರು ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.

ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಸಂಗೀತಾ ಮಾತನಾಡಿ, ಮಹಿಳೆಯರು ಕುಟುಂಬದ ಅಭಿವೃದ್ಧಿಯ ಜತೆಗೆ ಸಮಾಜದ ಪ್ರಗತಿಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಸಂಸ್ಕಾರ, ಆರೋಗ್ಯ, ಶಿಕ್ಷಣ ಹಾಗೂ ಜೀವನ ಕೌಶಲಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮವು ಕೇವಲ ಆರ್ಥಿಕ ಅಭಿವೃದ್ಧಿಗೆ ಸೀಮಿತವಾಗದೆ ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.

ಆರೋಗ್ಯ ಶಿಕ್ಷಣಾಧಿಕಾರಿ ಎಂ. ಪ್ರೇಮ ಅವರು ಅಸಾಂಕ್ರಾಮಿಕ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಮಹಿಳೆಯರ ಪಾತ್ರದ ಕುರಿತು ಮಾತನಾಡಿ, ಇಂದಿನ ಆಹಾರ ಪದ್ಧತಿ ಹಾಗೂ ಸ್ವಚ್ಛತೆಯ ಕಡೆಗಣನೆಯಿಂದ ಅನೇಕ ಕಾಯಿಲೆಗಳು ಎದುರಾಗುತ್ತಿವೆ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಕುಟುಂಬದ ಆರೋಗ್ಯ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಆರೋಗ್ಯ ಇಲಾಖೆಯಿಂದ ದೊರೆಯುವ ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರೋಗ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಡಹಳ್ಳಿ ಶಶಿಕುಮಾರ್ ಮಾತನಾಡಿ, ಧರ್ಮಸ್ಥಳ ಸಂಸ್ಥೆಯು ಸಮಾಜದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಇದರಿಂದ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯದರ್ಶಿ ಮಂಜುಳ ಭೀಮರಾವ್, ವಕೀಲೆ ನಳನಿಗೌಡ, ಕೋಲಾರ ಯೋಜನಾಧಿಕಾರಿ ಸಿದ್ದಗಂಗಯ್ಯ, ಮೇಲ್ವಿಚಾರಕರಾದ ಕಾಂತರಾಜ್ ಮತ್ತು ಅಶ್ವತ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande