
ಕೋಲಾರ, 03 ನವೆಂಬರ್ (ಹಿ.ಸ.)
ರಾಜ್ಯದಾದ್ಯಂತ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಗಳು, ಮಾರಣಾಂತಿಕ ದಾಳಿಗಳು ಹಾಗೂ ಜೀವ ಬೆದರಿಕೆಗಳನ್ನು ಖಂಡಿಸಿ, ವಕೀಲರ ಸುರಕ್ಷತೆಗೆ ಆಗ್ರಹಿಸಿ ಕೋಲಾರದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಹಾಗೂ ಬೆಂಗಳೂರು ವಕೀಲರ ಸಂಘದ ಕರೆಯ ಮೇರೆಗೆ ಕೋಲಾರ ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯ, ಕಿರಿಯ ಹಾಗೂ ಮಹಿಳಾ ವಕೀಲರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ವಕೀಲರು ಭಾಗವಹಿಸಿದ್ದರು.
ಕೋಲಾರ ವಕೀಲರ ಸಂಘದ ಆವರಣದಲ್ಲಿ ಸಭೆ ನಡೆಸಿದ ವಕೀಲರು, ವೃತ್ತಿ ನಿರ್ವಹಿಸುವ ಸಂದರ್ಭದಲ್ಲಿ ವಕೀಲರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. ನಂತರ ವಕೀಲರು ಬೈಕ್ ರ್ಯಾಲಿ ನಡೆಸುವ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ೨೦೨೩ಕ್ಕೆ ಅಗತ್ಯ ತಿದ್ದುಪಡಿ ತಂದು, ಕಾಯ್ದೆಯಡಿ ಬರುವ ಅಪರಾಧಗಳನ್ನು ಜಾಮೀನು ರಹಿತ ಅಪರಾಧಗಳೆಂದು ಘೋಷಿಸಬೇಕು. ವಕೀಲರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ವಕೀಲರ ಜೀವ, ವೃತ್ತಿಯ ಗೌರವ, ಸುರಕ್ಷತೆ ಮತ್ತು ಸ್ವಾಭಿಮಾನವನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ವಕೀಲರ ರಕ್ಷಣೆಗೆ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯ ಮೂಲಕ ವಕೀಲರ ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆಗೆ ಸರ್ಕಾರದ ಗಮನ ಸೆಳೆಯಲಾಯಿತು.
ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಸುಬ್ರಮಣಿ, ಹಿರಿಯ ವಕೀಲ ವೆಂಕಟರಾಮೇಗೌಡ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್