ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಷಡ್ಯಂತರ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಜಾಥಾ
ಪ್ರಧಾನಿ ಮೋದಿಯವರ ವಿರುದ್ಧ ಕಾಂಗ್ರೆಸ್ ಷಡ್ಯಂತರ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಜಾಥಾ
ಕೋಲಾರದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಜಾಥಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಹರೀಶ್ ತ್ರಿವೇದಿ ಮುಂತಾದವರಿದ್ದಾರೆ.


ಕೋಲಾರ, 03 ನವೆಂಬರ್ (ಹಿ.ಸ.):

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್), ಚುನಾವಣೆಯ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಹಾಗೂ ಸುಪ್ರೀಂ ಕೋರ್ಟ್‌ ಬಗ್ಗೆಯೂ ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸವಿಲ್ಲ. ತನ್ನ ಕುತಂತ್ರಗಳಿಂದಲೇ ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ನಡೆಸುತ್ತಿರುವ ಷಡ್ಯಂತ್ರಗಳ ವಿರುದ್ಧ ಬಿಜೆಪಿ ಜನಜಾಗೃತಿ ಮೂಡಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.

ಕೋಲಾರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಡೂಮ್‌ಲೈಟ್ ವೃತ್ತದಲ್ಲಿ ಆಯೋಜಿಸಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದ ಎಲ್ಲೆಡೆ ಬಿಜೆಪಿ ಜನಜಾಗೃತಿ ಜಾಥಾಗಳನ್ನು ಆಯೋಜಿಸುತ್ತಿದೆ. ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬುಡಸಮೇತ ಕಿತ್ತೆಸೆಯಲು ಜನರು ಸಂಕಲ್ಪ ಮಾಡಬೇಕು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿಗಳ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡವರು ಮತ್ತು ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಜನರೇ ಈಗ ಪಶ್ಚಾತ್ತಾಪ ಪಡುವಂತಾಗಿದೆ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆ ಹೆಸರಿನಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ಕೇವಲ ರಾಜಕೀಯ ನಾಟಕವಾಗಿದೆ. ಅರಾಜಕತೆ ಸೃಷ್ಟಿಸುವ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರುವ ಹೇಳಿಕೆಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಜನರಲ್ಲಿ ಗೊಂದಲ ಮೂಡಿಸುವ ಇಂತಹ ಪ್ರಯತ್ನಗಳಿಗೆ ಮರುಳಾಗದೆ ಮುಂಬರುವ ಚುನಾವಣೆಗಳಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಎನ್‌ಡಿಎಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಎಂಬ ಘೋಷಣೆಯೊಂದಿಗೆ ಕೋಲಾರದಿಂದ ಜನಜಾಗೃತಿ ಜಾಥಾ ಆರಂಭಿಸಲಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಜನರು ಆಶೀರ್ವದಿಸಬೇಕು ಎಂದರು.

ತಾವು ದೇಶದ ಪ್ರಧಾನಿಯಲ್ಲ, ಪ್ರಧಾನ ಸೇವಕ ಎಂದು ಘೋಷಿಸುವ ಮೂಲಕ ನರೇಂದ್ರ ಮೋದಿ ಜನಪ್ರಿಯತೆ ಗಳಿಸಿರುವುದನ್ನು ಕಾಂಗ್ರೆಸ್‌ಗೆ, ವಿಶೇಷವಾಗಿ ರಾಹುಲ್ ಗಾಂಧಿ ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ವಿಫಲ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಮೋದಿ ನೇತೃತ್ವದ ಬಿಜೆಪಿ ಜನಪರ ಆಡಳಿತವನ್ನು ಕಂಡು ಕಾಂಗ್ರೆಸ್ ಹತಾಶಗೊಂಡಿದೆ. ಬಿಜೆಪಿಗೆ ಜನಾದೇಶ ದೊರೆತಿರುವುದನ್ನು ಸಹಿಸದೆ, ಸಿಪಿಐ ಸೇರಿದಂತೆ ವಿವಿಧ ಪಕ್ಷಗಳೊಂದಿಗೆ ದೆಹಲಿಯ ಜಂತರ್‌ಮಂತರ್‌ನಲ್ಲಿ ಎಸ್‌ಐಆರ್ ನೆಪದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಶ್ರೀಲಂಕಾ, ಬಾಂಗ್ಲಾದೇಶ ಮತ್ತು ನೇಪಾಳದ ಮಾದರಿಯಲ್ಲಿ ಅರಾಜಕತೆ ಸೃಷ್ಟಿಸಲು ವಿಶೇಷ ತರಬೇತಿ ಪಡೆದವರ ತಂಡವನ್ನು ಪ್ರತಿಭಟನೆಗೆ ಕರೆಸಲಾಗಿದೆ ಎಂದು ಆರೋಪಿಸಿದರು.

ಜಾಥಾದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ಹರೀಶ್ ತ್ರಿವೇದಿ, ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಸಚಿವರಾದ ವರ್ತೂರು ಪ್ರಕಾಶ್ ಮತ್ತು ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande