ನವೆಂಬರ್ 5ರಂದು ಬೆಂಗಳೂರಿನಲ್ಲಿ ಇಂಡಿಯಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಇಂಡಿಯಾ' ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
india-bloc-protest-blr


ಕರ್ನಾಟಕ, 03 ನವೆಂಬರ್ (ಹಿ.ಸ.):

ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿಯನ್ನು ಖಂಡಿಸಿ 'ಇಂಡಿಯಾ' ಒಕ್ಕೂಟದ ಮೈತ್ರಿ ಪಕ್ಷಗಳ ನಾಯಕರು ನವೆಂಬರ್ 5ರಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮೈತ್ರಿಕೂಟದ ನಾಯಕರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ತೀವ್ರಗೊಳಿಸುವುದಾಗಿ ಘೋಷಿಸಿದ್ದಾರೆ.

ದೆಹಲಿ ಪ್ರತಿಭಟನೆಯ ಮುಂದುವರಿದ ಭಾಗ: ಬಿ ಕೆ ಹರಿಪ್ರಸಾದ್

ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರು, ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಇಂಡಿಯಾ' ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಈ ಬೃಹತ್ ಸಭೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಮುಂದುವರಿದು ಮಾತನಾಡಿದ ಅವರು, ದೇಶದಾದ್ಯಂತ ತಾಲೂಕು ಹಾಗೂ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ದೆಹಲಿಯಲ್ಲಿ ತೀರ್ಮಾನಿಸಲಾಗಿದೆ. ಕರ್ನಾಟಕದಲ್ಲಿ ನ.5ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನೆ ನಡೆಸಿ, ಆ ಬಳಿಕ ಜಿಲ್ಲಾ ಹಾಗೂ ತಾಲೂಕು ಮಟ್ಟಕ್ಕೂ ಹೋರಾಟವನ್ನು ವಿಸ್ತರಿಸಲಾಗುವುದು.

ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಬಿಜೆಪಿ ಮತ್ತು ಆರ್ಎಸ್ಎಸ್ ಯತ್ನಿಸುತ್ತಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡುವವರೆಗೂ ನಮ್ಮ ಈ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗೆ ವಿಕೇಂದ್ರೀಕೃತ ಹೋರಾಟ: ಕೆ. ಪ್ರಕಾಶ್

ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್ ಅವರು ಮಾತನಾಡಿ, ಮೈತ್ರಿಕೂಟದ ಪ್ರಮುಖ ಬೇಡಿಕೆಗಳನ್ನು ನಿಯೋಗದ ಪರವಾಗಿ ಮಂಡಿಸಿದರು.

ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು, ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಸುಪ್ರೀಂ ಕೋರ್ಟ್ ಸೂಚನೆಯಂತೆ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನು ಪ್ರಜಾಸತ್ತಾತ್ಮಕಗೊಳಿಸಬೇಕು.

ಚುನಾವಣಾ ಆಯುಕ್ತರಿಗೆ ಶಾಶ್ವತ ವಿನಾಯಿತಿ ನೀಡಿರುವ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಭಾರತವನ್ನು ಸರ್ವಾಧಿಕಾರಿ ನೆಲೆಗಟ್ಟಿಗೆ ಪರಿವರ್ತಿಸುವ ಹಾಗೂ ಕೋಮುವಾದಿ ಹಿಂದುತ್ವ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿರುವ ಬಿಜೆಪಿಯ ಪ್ರಯತ್ನಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಲು 'ಇಂಡಿಯಾ' ಒಕ್ಕೂಟದ ಎಲ್ಲಾ ಮಿತ್ರಪಕ್ಷಗಳು ಒಟ್ಟಾಗಿ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿವೆ ಎಂದು ಕೆ. ಪ್ರಕಾಶ್ ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande