ಕಲಬುರಗಿಯಲ್ಲಿ ಹಾಸ್ಟೆಲ್ನ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಕಲಬುರಗಿ, 06 ನವೆಂಬರ್ (ಹಿ.ಸ.): ನಗರದ ಅಂಬೇಡ್ಕರ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ನಿವಾಸಿ ಮುಜಾಹಿ
Kalaburagi-Hostel-Student-Mujahid-Patel-Suspicious-Death


ಕಲಬುರಗಿ, 06 ನವೆಂಬರ್ (ಹಿ.ಸ.):

ನಗರದ ಅಂಬೇಡ್ಕರ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ನಿವಾಸಿ ಮುಜಾಹಿದ್ ಪಟೇಲ್ (25) ಎಂದು ಗುರುತಿಸಲಾಗಿದೆ.

ಕಲಬುರಗಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಮುಜಾಹಿದ್, ತಡರಾತ್ರಿ ಹಾಸ್ಟೆಲ್ನ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿದ್ಯಾರ್ಥಿಯ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ತಳ್ಳಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಇನ್ನೊಂದೆಡೆ, ಇದೇ ಅಂಬೇಡ್ಕರ್ ವಸತಿ ನಿಲಯದಲ್ಲಿ ಕೆಲ ದಿನಗಳ ಹಿಂದಷ್ಟೇ ಮತ್ತೊಬ್ಬ ವಿದ್ಯಾರ್ಥಿಯನ್ನು ಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು.

ಆ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಹಾಸ್ಟೆಲ್ನ ಸುರಕ್ಷತೆ ಹಾಗೂ ವಿದ್ಯಾರ್ಥಿಗಳ ಭದ್ರತೆ ಕುರಿತು ಆತಂಕ ಮೂಡಿಸಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ಹಿಂದಿನ ನೈಜ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರ ಬಹಿರಂಗವಾಗಬೇಕಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande