
ಬೆಂಗಳೂರು, 06 ನವೆಂಬರ್ (ಹಿ.ಸ.):
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಗ್ರೇಟರ್ ಬೆಂಗಳೂರು ಜನತಾದಳ ಪಕ್ಷದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ದಿನಬಳಕೆಯ ಅಗತ್ಯ ವಸ್ತುಗಳು, ಹಾಲು ಮತ್ತು ಹಾಲಿನ ಉತ್ಪನ್ನಗಳು ಹಾಗೂ KSRTC, BMTC ಬಸ್ ಪ್ರಯಾಣ ದರವನ್ನು ಏಕಾಏಕಿ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬೃಹತ್ ಈ ಹೋರಾಟ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಗೌಡ ಅವರು; ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳಿ ವತಿಯಿಂದ ಸಾರ್ವಜನಿಕರಿಗೆ ವಿತರಿಸುವ ಹಾಲು, ಮೊಸರು, ತುಪ್ಪ, ಬೆಣ್ಣೆ, ಪನೀರ್ ಸೇರಿದಂತೆ ಇತರೆ ಹಾಲಿನ ಉತ್ಪನ್ನಗಳ ಬೆಲೆಯನ್ನು ₹8 ರಿಂದ ₹35 ವರೆಗೆ ಹೆಚ್ಚಿಸಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ, ಕೆಳ ಮಧ್ಯಮ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಈ ಏರಿಕೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳು ಪ್ರತಿನಿತ್ಯ ತಾಯಂದಿರು, ಮಕ್ಕಳು, ವಯಸ್ಸಾದವರು ಬಳಸುವ ಅಗತ್ಯ ಆಹಾರ ಪದಾರ್ಥವಾಗಿರುವುದರಿಂದ ಇದರ ಬೆಲೆ ಏರಿಕೆ ನೇರವಾಗಿ ಜನರ ಜೀವನ ನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.
ಈ ರೀತಿ ಹಾಲು ಮತ್ತು ಉತ್ಪನ್ನಗಳ ಮೇಲಿನ ಬೆಲೆ ಏರಿಕೆಯಿಂದ ಹೋಟೆಲ್ಗಳು, ಖಾನಾವಳಿಗಳು ಮತ್ತು ಇತರೆ ವಿತರಕರು ತಾವು ತಯಾರಿಸಿ ಒದಗಿಸುವ ಆಹಾರ ಪದಾರ್ಥಗಳ ಬೆಲೆಯನ್ನು ಗಗನಕ್ಕೇರಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕುಡಿಯುವ ನೀರಿನ ಅಭಾವ, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆ, ಕೃಷಿ ಉತ್ಪಾದನೆಯಲ್ಲಿ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ಅಕ್ಕಿ, ಸಕ್ಕರೆ, ಬೇಳೆಕಾಳುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿವೆ ಎಂದರು ಅವರು.
ಇದರ ಜತೆಗೆ ರಾಜ್ಯ ಸರ್ಕಾರದ ಸ್ವಯಂ ಸಂಸ್ಥೆಯಾದ KSRTC ಹಾಗೂ BMTC ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 23 ರಿಂದ 30 ರವರೆಗೆ ಹೆಚ್ಚಿಸಿರುವುದು ದಿನನಿತ್ಯ ಪ್ರಯಾಣಿಸುವ ಕಾರ್ಮಿಕರು, ವಿದ್ಯಾರ್ಥಿಗಳು, ನೌಕರರು, ಹಿರಿಯ ನಾಗರಿಕರು ಹಾಗೂ ಸಾಮಾನ್ಯ ಜನರ ಮೇಲೆ ಭಾರೀ ಹೊರೆ ಹಾಕಿದೆ.
ಸಾರ್ವಜನಿಕ ಸಾರಿಗೆ ವ್ಯವಸ್ಥೆ ಜನಸಾಮಾನ್ಯರ ಜೀವನಾಡಿಯಾಗಿದ್ದು, ದರ ಏರಿಕೆಯಿಂದ ಕುಟುಂಬಗಳ ಮಾಸಿಕ ಖರ್ಚು ಹೆಚ್ಚಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಆಹಾರ ಪದಾರ್ಥಗಳ ಬೆಲೆ ಏರಿಕೆ, ಹಾಲಿನ ಉತ್ಪನ್ನಗಳ ಬೆಲೆ ಏರಿಕೆ, ಬಸ್ ಪ್ರಯಾಣ ದರ ಹೆಚ್ಚಳ ಹಾಗೂ ಬರ ಪರಿಸ್ಥಿತಿಯಿಂದ ಉಂಟಾದ ಸಂಕಷ್ಟಗಳು ಒಟ್ಟಾಗಿ ಜನಸಾಮಾನ್ಯರ ಖರೀದಿ ಸಾಮರ್ಥ್ಯವನ್ನು ಕುಗ್ಗಿಸಿವೆ. ಬಡವರು ಮತ್ತು ಮಧ್ಯಮ ವರ್ಗದವರು ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಿಕೊಳ್ಳುವುದಕ್ಕೂ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು ಅವರು.
ಪ್ರಯಾಣಿಕರ ಹೆಚ್ಚಳವನ್ನು ಪ್ರತಿಬಾರಿ ಶ್ರೀಸಾಮಾನ್ಯ ಭರಿಸಬೇಕೆಂದು ರಾಜ್ಯ ಸರ್ಕಾರದ ನಿಲುವು ಸಮಂಜಸವಲ್ಲ. ಈ ಹೊರೆಯನ್ನು ರಾಜ್ಯ ಸರ್ಕಾರವೇ ಹೊರಬೇಕು ಎಂದು ಅವರು ಹೇಳಿದರು.
ಕೂಡಲೇ ಹಾಲು, ಮೊಸರು, ತುಪ್ಪ, ಬೆಣ್ಣೆ, ಪನೀರ್ ಹಾಗೂ ಇತರೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು.
KSRTC ಹಾಗೂ ಇತರೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳವನ್ನು ಹಿಂಪಡೆಯಬೇಕು ಹಾಗೂ ರಾಜ್ಯದಲ್ಲಿ ಉಂಟಾಗುವ ಬೀಕರ ಬರಪೀಡಿತ ಹಿನ್ನೆಲೆಯಲ್ಲಿ ಬಸ್ ದರ ಏರಿಕೆಯನ್ನು ತಡೆಯಿಡಬೇಕು.
ಬರಪೀಡಿತ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜಾನುವಾರು ಸಾಕಾಣಿಕೆದಾರರಿಗೆ ವಿಶೇಷ ಪರಿಹಾರ ಕ್ರಮಗಳನ್ನು ಘೋಷಿಸಬೇಕು
ಬರ ಪೀಡಿತ ಗ್ರಾಮಗಳಲ್ಲಿ ಜನಸಾಮಾನ್ಯರಿಗೆ ಶೇಕಡ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಮತ್ತು ನೀರಿನ ಲಭ್ಯತೆಯನ್ನು ಖಚಿತಪಡಿಸಬೇಕು.
ಅಕ್ಕಿ, ಸಕ್ಕರೆ, ಬೇಳೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.
ಬಡ, ಕೆಳ ಮಧ್ಯಮ ಹಾಗೂ ಮಧ್ಯಮ ವರ್ಗದ ಜನರ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಬೆಲೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು.
ಜನಸಾಮಾನ್ಯರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಸೂಕ್ತ ಕ್ರಮ ಜರುಗಿಸುತ್ತದೆ ಎಂಬ ನಿರೀಕ್ಷೆಯಿಂದ ಈ ಮನವಿಯನ್ನು ಸಲ್ಲಿಸುತ್ತಿದ್ದೇವೆ.
ಒಂದು ವೇಳೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಹಿಂಪಡೆಯುವಲ್ಲಿ ವಿಫಲವಾದರೆ, ಜನತಾದಳ (ಜಾತ್ಯತೀತ) ವತಿಯಿಂದ ರಾಜ್ಯದಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಜವರಾಯಿ ಗೌಡ, ಮಾಜಿ ಎಂಎಲ್ಸಿಗಳಾದ ಕೆ.ಎ.ತಿಪ್ಪೇಸ್ವಾಮಿ, ಈ. ಕೃಷ್ಣಪ್ಪ, ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.
ಪ್ರತಿಭಟನೆಯ ನಂತರ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖಂಡರ ನಿಯೋಗವು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರವನ್ನು ಸಲ್ಲಿಸಿತು. ಸದರಿ ಮನವಿಯನ್ನು ಘನವೆತ್ತ ರಾಜ್ಯಪಾಲರಿಗೆ ಮತ್ತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R