
ಧಾರವಾಡ, 07 ನವೆಂಬರ್ (ಹಿ.ಸ.):
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಸುರಕ್ಷಿತ ವಾತಾವರಣ ನಿರ್ಮಿಸುವ ಉದ್ದೇಶದಿಂದ ಅಕ್ಕಪಡೆ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ವಿಸ್ತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚಿಸಿದರು.
ಧಾರವಾಡದ ಜೆ.ಎಸ್.ಎಸ್. ಕಾಲೇಜಿನ ಕದಂಬ ಕ್ರೀಡಾಂಗಣದಲ್ಲಿ ಅಕ್ಕಪಡೆ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗೃಹರಕ್ಷಕಿಯರ ಆತ್ಮರಕ್ಷಣಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ-ಕಾಲೇಜುಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮತ್ತು ಸುರಕ್ಷತೆಯ ಅರಿವು ಮೂಡಿಸಬೇಕು. ಮಹಿಳೆಯರು ಯಾವುದೇ ಭಯವಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವ ವಾತಾವರಣ ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಮಹಿಳೆಯರ ರಕ್ಷಣೆ ಮತ್ತು ದೌರ್ಜನ್ಯ ತಡೆಗೆ ಮಹಿಳಾ ಗೃಹರಕ್ಷಕಿಯರ ಪಾತ್ರ ಮಹತ್ವದ್ದಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಬೋರಸೆ ಭೂಷಣ್ ಗುಲಾಬರಾವ್ ಮಾತನಾಡಿ, ಅಕ್ಕಪಡೆ ಕಾರ್ಯಕ್ರಮದಿಂದ ರಾಜ್ಯದಲ್ಲಿ ಹಲವು ಬಾಲ್ಯವಿವಾಹಗಳನ್ನು ತಡೆಯಲು ಸಾಧ್ಯವಾಗಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಕಿರುಕುಳ ಅಥವಾ ತೊಂದರೆಯಾದರೆ ಸಹಾಯವಾಣಿ 1098ಕ್ಕೆ ಹಾಗೂ ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಬೇಕು. ತುರ್ತು ಕರೆ ಬಂದ 10 ನಿಮಿಷಗಳೊಳಗೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನೆರವು ನೀಡಲಿದ್ದಾರೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಹೆಣ್ಣುಮಕ್ಕಳ ವೈಯಕ್ತಿಕ ಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ಬೆದರಿಸುವ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ವೈಯಕ್ತಿಕ ಚಿತ್ರಗಳನ್ನು ಇತರರೊಂದಿಗೆ ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅಕ್ಕಪಡೆಯ ಮಹಿಳಾ ಗೃಹರಕ್ಷಕಿಯರು ಆತ್ಮರಕ್ಷಣೆಯ ಕೌಶಲ ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತರಬೇತುದಾರರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.