ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು, ಚೂರಿ ಕಳುಹಿಸಿ ಬೆದರಿಕೆ ಆರೋಪ: ಪೊಲೀಸ್ ಆಯುಕ್ತರಿಗೆ ಬಿಜೆಪಿ ದೂರು
ಬೆಂಗಳೂರು, 07 ನವೆಂಬರ್ (ಹಿ.ಸ.): ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸದ ಬಳಿ ಚಾಕು, ಚೂರಿಗಳಂತಹ ವಸ್ತುಗಳನ್ನು ಆನ್‌ಲೈನ್ ಮೂಲಕ ಬುಕ್ ಮಾಡಿ ಕಳುಹಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್
ದೂರು ನೀಡಿದ ಬಿಜೆಪಿ


ಬೆಂಗಳೂರು, 07 ನವೆಂಬರ್ (ಹಿ.ಸ.):

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸದ ಬಳಿ ಚಾಕು, ಚೂರಿಗಳಂತಹ ವಸ್ತುಗಳನ್ನು ಆನ್‌ಲೈನ್ ಮೂಲಕ ಬುಕ್ ಮಾಡಿ ಕಳುಹಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಸುಮಾರು 20 ಮೊಬೈಲ್ ಸಂಖ್ಯೆಗಳ ಮೂಲಕ ಬ್ಲಿಂಕಿಟ್‌ನಲ್ಲಿ ವಸ್ತುಗಳನ್ನು ಬುಕ್ ಮಾಡಿ ಪಾರ್ಸೆಲ್ ಕಳುಹಿಸುವ ಪ್ರಯತ್ನ ನಡೆದಿದೆ. ಅಲ್ಲದೆ, 8ರಿಂದ 10 ಮಂದಿ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರು ನಿವಾಸದ ಗೇಟ್ ಸುತ್ತಮುತ್ತ ಜಮಾಯಿಸಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಕೃತ್ಯದ ಹಿಂದೆ ಕೆಪಿಸಿಸಿ ಕಾರ್ಯದರ್ಶಿ ಮನೋಹರ್ ಮತ್ತಿತರರ ಕುಮ್ಮಕ್ಕು ಇರುವ ಶಂಕೆಯನ್ನೂ ವ್ಯಕ್ತಪಡಿಸಿದೆ.

ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ತಕ್ಷಣ ಎಫ್‌ಐಆರ್ ದಾಖಲಿಸಿ, ಬ್ಲಿಂಕಿಟ್ ಆರ್ಡರ್‌ಗಳು, ಮೊಬೈಲ್ ಸಂಖ್ಯೆಗಳು ಹಾಗೂ ವಹಿವಾಟಿನ ವಿವರಗಳನ್ನು ಪರಿಶೀಲಿಸಬೇಕು. ಕೃತ್ಯದ ಹಿಂದಿರುವವರನ್ನು ಪತ್ತೆಹಚ್ಚಿ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪೂರೈಕೆ ಸಂಸ್ಥೆಯ ಜವಾಬ್ದಾರಿಯನ್ನೂ ನಿಗದಿಪಡಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಆರ್. ಅಶೋಕ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ಎದುರಿಸಬೇಕು. ಬೆದರಿಕೆ ತಂತ್ರಗಳಿಗೆ ಬಿಜೆಪಿ ಬಗ್ಗುವುದಿಲ್ಲ ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande