
ಕಲಬುರಗಿ, 08 ನವೆಂಬರ್ (ಹಿ.ಸ.):
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಮಾರುಕಟ್ಟೆಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ನಗರದ ಸೂಪರ್ ಮಾರ್ಕೆಟ್ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿದೆ.
ಹಬ್ಬದ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಆಗಮಿಸುತ್ತಿದ್ದು, ಎಲ್ಲೆಡೆ ಜನಜಂಗುಳಿ ಕಂಡುಬರುತ್ತಿದೆ.
ದೀಪಾವಳಿ ಆಚರಣೆಗೆ ಅಗತ್ಯವಾದ ವಿವಿಧ ಬಗೆಯ ಹೂವುಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ವಿಶೇಷವಾಗಿ ಗುಲಾಬಿ ಹಾಗೂ ಚೆಂಡು ಹೂವುಗಳಿಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದೆ.
ಮನೆಗಳ ಅಲಂಕಾರ ಹಾಗೂ ದೇವರ ಪೂಜೆಗೆ ಹೂವುಗಳನ್ನು ಖರೀದಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ. ಹಣ್ಣುಗಳ ಖರೀದಿಯೂ ಜೋರಾಗಿದ್ದು, ಹಣ್ಣುಗಳ ಬೆಲೆ ಗಗನಕ್ಕೇರಿರುವುದು ಗ್ರಾಹಕರಿಗೆ ಕೊಂಚ ಹೊರೆಯಾಗಿದೆ.
ಇನ್ನು ದೀಪಾವಳಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ಪಟಾಕಿ ಖರೀದಿಯೂ ಜೋರಾಗಿದೆ. ಮಕ್ಕಳು ಹಾಗೂ ಕುಟುಂಬದವರು ಪಟಾಕಿ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮತ್ತೊಂದೆಡೆ, ಮಾರುಕಟ್ಟೆಯಲ್ಲಿ ಜನಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಿವಿಧ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಮಳೆಯ ಕೊರತೆ ಹಾಗೂ ಬರದ ಪರಿಸ್ಥಿತಿಯ ನಡುವೆಯೂ ಜನರು ಸಂಪ್ರದಾಯದಂತೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಸಿದ್ದಾರೆ.
ಬೆಲೆ ಏರಿಕೆಯ ನಡುವೆಯೂ ಹಬ್ಬದ ಖರೀದಿ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ. ಒಟ್ಟಿನಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಕಲಬುರಗಿ ಮಾರುಕಟ್ಟೆ ಹಬ್ಬದ ಬಣ್ಣದಲ್ಲಿ ಕಂಗೊಳಿಸುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R