
ಕಲಬುರಗಿ, 08 ನವೆಂಬರ್ (ಹಿ.ಸ.):
ಅನ್ನಭಾಗ್ಯ ಯೋಜನೆಯಡಿ ಬಡ ಕುಟುಂಬಗಳಿಗೆ ವಿತರಿಸಬೇಕಾದ ಅಕ್ಕಿ ಹಾಗೂ ಜೋಳವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ಗ್ರಾಮದ ಬಳಿ ಬೆಳಕಿಗೆ ಬಂದಿದೆ.
ಗ್ರಾಮದ ಸಮೀಪದ ಶೆಡ್ವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 12 ಟನ್ ಅನ್ನಭಾಗ್ಯ ಅಕ್ಕಿ ಹಾಗೂ 6 ಟನ್ ಜೋಳವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಜಪ್ತಿ ಮಾಡಲಾದ 12 ಟನ್ ಅಕ್ಕಿಯ ಮೌಲ್ಯ ಸುಮಾರು 4.26 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದ್ದು, 6 ಟನ್ ಜೋಳದ ಮೌಲ್ಯ 2.10 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ಒಟ್ಟು 6.36 ಲಕ್ಷ ರೂಪಾಯಿ ಮೌಲ್ಯದ 18 ಟನ್ ಆಹಾರ ಧಾನ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಬೇಕಾದ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಸಂಗ್ರಹಿಸಿ, ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲು ಸಿದ್ಧತೆ ನಡೆಸಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಂಗ್ರಹದ ಹಿಂದಿರುವ ವ್ಯಕ್ತಿಗಳು ಯಾರು ಮತ್ತು ಧಾನ್ಯಗಳನ್ನು ಎಲ್ಲಿಂದ ತರಲಾಗಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ವಿತರಿಸಬೇಕಾದ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಸಂಗ್ರಹಿಸಿ ಬೇರೆ ರಾಜ್ಯಕ್ಕೆ ಸಾಗಾಟ ಮಾಡಲು ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆದಿದೆ ಎಂದು ಪೋಲಿಸ್ ಇಲಾಖೆ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R