
ಬೆಂಗಳೂರು, 09 ನವೆಂಬರ್ (ಹಿ.ಸ.):
ಕರ್ನಾಟಕದ ಕೈಗಾರಿಕಾ ಪ್ರಗತಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಒಟ್ಟು ₹6,825 ಕೋಟಿ ಬಂಡವಾಳ ಹೂಡಿಕೆಯ 147 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳ ಮೂಲಕ ರಾಜ್ಯದಲ್ಲಿ ಸುಮಾರು 18,600ಕ್ಕೂ ಅಧಿಕ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ.
ಅನುಮೋದನೆ ಪಡೆದ 147 ಯೋಜನೆಗಳ ಪೈಕಿ 131 ಯೋಜನೆಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹೊರಗೆ ಸ್ಥಾಪನೆಯಾಗಲಿವೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೈಗಾರಿಕೆಗಳನ್ನು ವಿಸ್ತರಿಸುವ ಹಾಗೂ ಬೆಂಗಳೂರು ಹೊರಗಿನ ಪ್ರದೇಶಗಳಲ್ಲಿ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಸರ್ಕಾರದ 'ಬೆಂಗಳೂರು ಹೊರಗೂ ಕೈಗಾರಿಕಾ ಬೆಳವಣಿಗೆ' ಆಶಯಕ್ಕೆ ಈ ನಿರ್ಧಾರ ಬಲ ನೀಡಲಿದೆ.
ವಿಶೇಷವಾಗಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಯಿಂದ ಸ್ಥಳೀಯ ಯುವಜನರಿಗೆ ಉದ್ಯೋಗಾವಕಾಶಗಳು ದೊರೆಯಲಿದ್ದು, ಆಯಾ ಪ್ರದೇಶಗಳ ಆರ್ಥಿಕ ಪ್ರಗತಿಗೂ ವೇಗ ಸಿಗುವ ನಿರೀಕ್ಷೆಯಿದೆ.
ಆಹಾರ ಸಂಸ್ಕರಣೆ, ಜವಳಿ, ದತ್ತಾಂಶ ಕೇಂದ್ರ, ಅರೆವಾಹಕ, ವಿದ್ಯುನ್ಮಾನ, ವೈಮಾಂತರಿಕ್ಷ, ಮಾಹಿತಿ ತಂತ್ರಜ್ಞಾನ ಹಾಗೂ ಸಾಮಾನ್ಯ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವಲಯಗಳಲ್ಲಿ ಹೂಡಿಕೆಗೆ ಅನುಮೋದನೆ ನೀಡಲಾಗಿದೆ.
₹50 ಕೋಟಿಗೂ ಅಧಿಕ ಹೂಡಿಕೆಯ 36 ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಯೋಜನೆಗಳಿಂದಲೇ ₹4,507.71 ಕೋಟಿ ಬಂಡವಾಳ ಹರಿದುಬರಲಿದ್ದು, 12,074 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.
ಕೈಗಾರಿಕೆಗಳ ಬೆಳವಣಿಗೆಯ ಜತೆಗೆ ಉದ್ಯೋಗಾವಕಾಶಗಳು ಸ್ಥಳೀಯವಾಗಿಯೇ ಸೃಷ್ಟಿಯಾಗಬೇಕು ಹಾಗೂ ಅಭಿವೃದ್ಧಿಯ ಫಲ ರಾಜ್ಯದ ಪ್ರತಿಯೊಂದು ಜಿಲ್ಲೆಗೂ ತಲುಪಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಹೂಡಿಕೆ ಸ್ನೇಹಿ ವಾತಾವರಣ ನಿರ್ಮಾಣ, ಉದ್ಯಮ ಪ್ರಕ್ರಿಯೆಗಳ ಸರಳೀಕರಣ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಆದ್ಯತೆ ಮುಂದುವರಿಯಲಿದೆ ಎಂದು ಸಚಿವರು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.